ಶ್ರೀನಗರ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಪಾಂಪೋರ್‌ನಲ್ಲಿರುವ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ (ಇಡಿಐ) ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ ಸತತ ಮೂರನೇ ದಿನವಾದ ಸೋಮವಾರವೂ ಮುಂದುವರೆದಿದೆ.
ಪಠಾಣ್‌ಕೋಟ್ ವಾಯುನೆಲೆ ಮೇಲಿನ ದಾಳಿ ನೆನಪಿಸುವಂಥ ಈ ಕಾರ್ಯಾಚರಣೆಯಲ್ಲಿ ಈವರೆಗೂ ಇಬ್ಬರು ಸೇನಾಧಿಕಾರಿಗಳು ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.
ಸೋಮವಾರ ನಸುಕಿನ 5.30ರ ವೇಳೆಗೆ ಉಗ್ರರು ಹಾಗೂ ಭದ್ರತಾ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶ್ರೀನಗರ–ಜಮ್ಮು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಪಾಂಪೋರ್‌ನಲ್ಲಿ ಶನಿವಾರ ಸಿಆರ್‌ಪಿಎಫ್ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಬಳಿಕ ಉಗ್ರರು ಸಮೀಪದ ಸರ್ಕಾರ ಕಟ್ಟಡ ಸೇರಿಕೊಂಡಿದ್ದರು. ಘಟನೆಯಲ್ಲಿ ಇಬ್ಬರು ಯೋಧರು ಹಾಗೂ ಮೂವರು ನಾಗರಿಕರು ಮೃತಪಟ್ಟಿದ್ದರು.
ಭಯೋತ್ಪಾದಕರ ಸಂಖ್ಯೆ ಹಾಗೂ ಅವರ ಬಳಿ ಇರುವ ಶಸ್ತ್ರಾಸ್ತ್ರಗಳ ಪ್ರಮಾಣದ ಕುರಿತು ತಿಳಿದು ಬಂದಿಲ್ಲ. ಆದ್ದರಿಂದ ಭದ್ರತಾ ಸಿಬ್ಬಂದಿ ರಕ್ಷಣಾತ್ಮಕ ತಂತ್ರಕ್ಕೆ ಮೊರೆ ಹೋಗಿದ್ದಾರೆ ಎಂದೂ ಪೊಲೀಸರು ತಿಳಿಸಿದ್ದಾರೆ.