ರಾಷ್ಟ್ರೀಯ

ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಕಿರಣ್ ಬೇಡಿ

Pinterest LinkedIn Tumblr

Kiran-Bedi

ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.

35 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಕಿರಣ್ ಬೇಡಿ 2007ರಲ್ಲಿ ಸ್ವಯಂ ನಿವೃತ್ತಿ ಪಡೆದಿದ್ದರು. ನಂತರ 2011ರಲ್ಲಿ ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಪಾಲ್ಗೊಂಡಿದ್ದರು. 2012ರಲ್ಲಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷ ಪ್ರಾರಂಭಿಸಿದ ನಂತರ ಬೇಡಿ ಆಂದೋಲನದಿಂದ ದೂರ ಸರಿದಿದ್ದರು. ನಂತರ 2015ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದ ಬೇಡಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧ ಸ್ಪರ್ಧಿಸಿದ್ದರು. ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿತರಾಗಿದ್ದ ಬೇಡಿ ಕೃಷ್ಣ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಲನುಭವಿಸಿದ್ದರು. ನಂತರ ಅವರು ಸಕ್ರಿಯ ರಾಜಕಾರಣದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ.

ಇತ್ತೀಚೆಗೆ ಪುದುಚೆರಿಯಲ್ಲಿ ನಡೆದ ವಿಧಾನ ಸಭಾ ಚುನಾವಣೆಯಲ್ಲಿ 30 ಸ್ಥಾನಗಳಲ್ಲಿ ಕಾಂಗ್ರೆಸ್ 15 ಮತ್ತು ಕಾಂಗ್ರೆಸ್ನ ಮೈತ್ರಿ ಪಕ್ಷ ಡಿಎಂಕೆ 2 ಸ್ಥಾನ ಪಡೆಯುವ ಮೂಲಕ ಅಧಿಕಾರದ ಗದ್ದುಗೆಗೇರಲು ಸಿದ್ಧತೆ ನಡೆಸಿವೆ. ಕಿರಣ್ ಬೇಡಿ ಅಜಯ್ ಕುಮಾರ್ ಸಿಂಗ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ನೇಮಕವಾಗಿದ್ದಾರೆ.

1972ರಲ್ಲಿ ಪ್ರಥಮ ಮಹಿಳಾ ಐಪಿಎಸ್ ಅಧಿಕಾರಿಯಾಗಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದರು. ‘ಇಂತಹ ಅದ್ಭುತ ಅವಕಾಶ ನೀಡಿದ್ದಕ್ಕಾಗಿ ಸರ್ಕಾರಕ್ಕೆ ಆಭಾರಿಯಾಗಿದ್ದೇನೆ’ ಎಂದು ಬೇಡಿ ಅವರು ಧನ್ಯವಾದ ಸಲ್ಲಿಸಿದ್ದಾರೆ.

Comments are closed.