ರಾಷ್ಟ್ರೀಯ

‘ನೋಟು ರದ್ದು’ ನಿರ್ಧಾರ ತಡೆ ಅರ್ಜಿ ತಿರಸ್ಕರಿಸಿದ ಸುಪ್ರೀಂ

Pinterest LinkedIn Tumblr

suprimನವದೆಹಲಿ: ₹500 ಮತ್ತು ₹1000 ಮುಖಬೆಲೆಯ ನೋಟುಗಳ ಚಲಾವಣೆ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಬೇಕೆಂದು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

ನೋಟು ರದ್ದು ನಿರ್ಧಾರದಿಂದಾಗಿ ಸಾರ್ವಜನಿಕರಿಗೆ ಕಷ್ಟವಾಗುತ್ತಿದೆ. ಆದ್ದರಿಂದ ಸರ್ಕಾರದ ಈ ನಿರ್ಧಾರಕ್ಕೆ ತಡೆ ನೀಡಬೇಕೆಂದು ಆಗ್ರಹಿಸಿ ಅರ್ಜಿ ಸಲ್ಲಿಸಲಾಗಿತ್ತು.

ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾದ ಟಿಎಸ್ ಠಾಕೂರ್ ಮತ್ತು ಡಿವೈ ಚಂದ್ರಚೂಡ್ ಅವರ ನ್ಯಾಯಪೀಠವು ಸರ್ಕಾರದ ನಿರ್ಧಾರಕ್ಕೆ ತಡೆ ನೀಡುವುದಿಲ್ಲ ಎಂದು ಹೇಳಿದೆ.

ಅರ್ಜಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಾಲ್ ಅವರು, ಸರ್ಕಾರದ ನೋಟು ರದ್ದು ನಿರ್ಧಾರದಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ನಿಯಂತ್ರಿಸಲು ಸರ್ಕಾರ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಪ್ರಶ್ನಿಸಿದ್ದಾರೆ.

ಏತನ್ಮಧ್ಯೆ, ಜನರಿಗುಂಟಾದ ಅನಾನುಕೂಲಗಳನ್ನು ನಿವಾರಿಸಲು ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ತೆಗೆದುಕೊಂಡಿರುವ ಕ್ರಮ ಮತ್ತು ಇನ್ನು ತೆಗೆದುಕೊಳ್ಳಲಿರುವ ಕ್ರಮಗಳ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಪೀಠ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರಿಗೆ ಹೇಳಿದೆ.

ವಿಚಾರಣೆಯಲ್ಲಿ ಕೇಂದ್ರ ಸರ್ಕಾರಕ್ಕಾಗಲೀ, ಭಾರತೀಯ ರಿಸರ್ವ್ ಬ್ಯಾಂಕ್‌ಗಾಗಲೀ ನೋಟಿಸ್ ನೀಡದೆ ನ್ಯಾಯಪೀಠವು ಮುಂದಿನ ವಿಚಾರಣೆಯನ್ನು ನವೆಂಬರ್ 25ಕ್ಕೆ ಮುಂದೂಡಿದೆ.

ಸರ್ಕಾರ ನೋಟು ರದ್ದು ಮಾಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು ನಿಜ ಎಂದು ಹೇಳಿದ ನ್ಯಾಯಪೀಠವು, ಕೇಂದ್ರ ಸರ್ಕಾರ ಕಪ್ಪು ಹಣದ ಮೇಲೆ ನಿರ್ದಿಷ್ಟ ದಾಳಿ ಮಾಡಲಿ. ಆದರೆ ದೇಶದ ಸಾಮಾನ್ಯ ಜನರ ಮೇಲೆ ನಿರ್ದಿಷ್ಟ ದಾಳಿ ಮಾಡುವುದು ಬೇಡ ಎಂದಿದೆ.

Comments are closed.