ನವದೆಹಲಿ: ಏಮ್ಸ್ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಸೋಮವಾರ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಡಿಸೆಂಬರ್ 10ರಂದು ಶಸ್ತ್ರ ಚಿಕಿತ್ಸೆಗೆ ಒಳಗಾದಿದ್ದ ಸುಷ್ಮಾ ಸ್ವರಾಜ್ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಇಂದು ಸಂಜೆ 7ಗಂಟೆಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಸುಷ್ಮಾ ಅವರು ಡಿಸ್ಚಾರ್ಜ್ ಆಗುವ ಮುನ್ನ ಆಸ್ಪತ್ರೆಗೆ ಭೇಟಿ ನೀಡಿದ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರು, ವಿದೇಶಾಂಗ ಸಚಿವೆಯ ಚೇತರಿಕೆ ಬಗ್ಗೆ ತೃಪ್ತಿ ಇರುವುದಾಗಿ ಹೇಳಿದ್ದಾರೆ.
ಕಳೆದ 20 ವರ್ಷಗಳಿಂದಲೂ ಸುಷ್ಮಾ ಸ್ವರಾಜ್ ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ನವೆಂಬರ್ 7 ರಂದು ಸುಷ್ಮಾ ಅವರು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಸುಷ್ಮಾ ಅವರು ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆಂದು ವೈದ್ಯರು ತಿಳಿಸಿದ್ದರು. ನಂತರ ತುರ್ತು ನಿಗಾ ಘಟಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದಾದ ಕೆಲವೇ ದಿನಗಳಲ್ಲಿ ಸುಷ್ಮಾ ಅವರಿಗೆ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. ಇದೀಗ ಸುಷ್ಮಾ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.