ಲಖನೌ: ಉತ್ತರ ಪ್ರದೇಶದ ಆಡಳಿತರೂಢ ಸಮಾಜವಾದಿ ಪಕ್ಷದಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಿದ್ದು, ತಂದೆ ಮುಲಾಯಂ ಸಿಂಗ್ ಯಾದವ್ ಅವರ ವಿರುದ್ಧವೇ ತಿರುಗಿ ಬಿದ್ದಿರುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮುಂಬರುವ ವಿಧಾನಸಭೆ ಚುನಾವಣೆಗಾಗಿ ತಮ್ಮ ಬೆಂಬಲಿಗರನ್ನೊಳಗೊಂಡ 167 ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದಾರೆ.
ಪಕ್ಷದ ಮುಖ್ಯಸ್ಥ ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರು ತಮ್ಮೊಂದಿಗೆ ಚರ್ಚಿಸಿದೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ ಅಖಿಲೇಶ್ ಯಾದವ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ತಮ್ಮ ಬೆಂಬಲಿಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮೂಲಕ ತಂದೆಗೆ ತಿರುಗೇಟು ನೀಡಿದ್ದಾರೆ.
ಅಖಿಲೇಶ್ ಯಾದವ್ ಅವರು ಇಂದು ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಹಾಗೂ ಚಿಕ್ಕಪ್ಪ ಶಿವಪಾಲ್ ಯಾದವ್ ಅವರೊಂದಿಗೆ ಗೌಪ್ಯ ಸಭೆ ನಡೆಸಿದ ನಂತರ 167 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ್ದು, ಈ ಮೂಲಕ ತಾವು ಪಕ್ಷದ ಬೆಂಬಲದೊಂದಿಗೆ ಅಥವಾ ಪಕ್ಷದ ಬೆಂಬಲ ಇಲ್ಲದೆಯೂ ಚುನಾವಣೆ ಎದುರಿಸಲು ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ.
ನಿನ್ನೆಯಷ್ಟೇ ಮುಲಾಯಂ ಸಿಂಗ್ ಯಾದವ್ ಅವರು ಸಮಾಜವಾದಿ ಪಕ್ಷದ 325 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರು. ಅಲ್ಲದೆ ನಂತರ ಇನ್ನೂ 78 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಈ ವೇಳೆ ಅಖಿಲೇಶ್ ಯಾದವ್ ಅವರು ಗೈರು ಆಗಿದ್ದರು.