ರಾಷ್ಟ್ರೀಯ

ಅಕ್ರಮ ಆಸ್ತಿ: ಜಯಲಲಿತಾ ಹೆಸರು ತೆಗೆಯಲು ರಾಜ್ಯದ ಮನವಿಗೆ ಸುಬ್ರಹ್ಮಣ್ಯನ್ ಸ್ವಾಮಿ ಬೆಂಬಲ

Pinterest LinkedIn Tumblr


ನವದೆಹಲಿ: ತಮಿಳುನಾಡಿನ ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಹೆಸರನ್ನು ಅಕ್ರಮ ಆಸ್ತಿ ಕೇಸಿನಿಂದ ತೆಗೆದುಹಾಕುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಹಾಕಿರುವ ಮನವಿ ಅರ್ಜಿಗೆ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಅಕ್ರಮ ಆಸ್ತಿ ಕೇಸಿನಲ್ಲಿ ಕರ್ನಾಟಕ ಸರ್ಕಾರ ಜಯಲಲಿತಾ ಅವರ ಹೆಸರನ್ನು ತೆಗೆದುಹಾಕುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಅದು ಕಾನೂನು ವಿಷಯವಾಗಿರುವುದರಿಂದ ಸುಪ್ರೀಂ ಕೋರ್ಟ್ ಪರಿಶೀಲನೆ ಮಾಡಬಹುದು ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ತಮಿಳುನಾಡು ರಾಜ್ಯಪಾಲ ಸಿ.ವಿದ್ಯಾಸಾಗರ ರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸುಬ್ರಹ್ಮಣ್ಯನ್ ಸ್ವಾಮಿ, ರಾಜ್ಯದಲ್ಲಿ ಈಗ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ ತೀರ್ಮಾನ ತೆಗೆದುಕೊಳ್ಳಲು ವಿಳಂಬ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ನಾಳೆಯಷ್ಟು ಹೊತ್ತಿಗೆ ತಮಿಳುನಾಡಿನ ಮುಖ್ಯಮಂತ್ರಿ ಯಾರಾಗಬೇಕೆಂಬುದನ್ನು ರಾಜ್ಯಪಾಲರು ನಿರ್ಧರಿಸಬೇಕು. ಇಲ್ಲದಿದ್ದರೆ ಸಂವಿಧಾನದ 32ನೇ ಪರಿಚ್ಛೇದದಡಿಯಲ್ಲಿ ಕುದುರೆ ವ್ಯಾಪಾರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಕೇಸು ದಾಖಲಿಸಬಹುದು ಎಂದು ಕಿಡಿಕಾರಿದ್ದಾರೆ.
ನಿನ್ನೆ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಕೂಡ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪಕ್ಷದಲ್ಲಿ ವಿಭಜನೆಯುಂಟುಮಾಡುವ ಉದ್ದೇಶದಿಂದ ವಿಳಂಬ ತಂತ್ರ ಅನುಸರಿಸುತ್ತಿದ್ದಾರೆ ಎಂದು ಆಪಾದಿಸಿದ್ದರು.

Comments are closed.