ರಾಷ್ಟ್ರೀಯ

ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

Pinterest LinkedIn Tumblr

ಗಾಂಧಿನಗರ: ಕಾಂಗ್ರೆಸ್ ಪಕ್ಷದ ಹಲವು ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿದ್ದು ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಗುಜರಾತ್ ಗಾಂಧಿನಗರದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿದ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆ ಗುಜರಾತ್ ನಲ್ಲಿ ವಿಪಕ್ಷಗಳಿಗೆ ನಡುಕ ಶುರುವಾಗಿದೆ ಎಂದರು.

ಇದೇ ವೇಳೆ ಬೋಪೋರ್ಸ್ ಹಗರಣವನ್ನು ಮತ್ತೆ ಪ್ರಸ್ತಾಪಿಸಿದ ಮೋದಿ ಈ ಹಗರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಶತಾಯ ಗತಾಯ ಪ್ರಯತ್ನಿಸಿತ್ತು. ಕಾಂಗ್ರೆಸ್ ನ ಹಲವು ನಾಯಕರು ಭ್ರಷ್ಟಾಚಾರ ತೊಡಗಿದ್ದು ಇದರಿಂದಾಗಿ ಹಲವು ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಮತ್ತು ಮೊರಾರ್ಜಿ ದೇಸಾಯಿ ಅವರಂತ ಮಹಾನ್ ನಾಯಕರನ್ನು ಕಾಂಗ್ರೆಸ್ ಅವಮಾನಿಸಿತ್ತು. ಇನ್ನು ನರ್ಮದಾ ನದಿ ಡ್ಯಾಂ ಸಹ ಕಾಂಗ್ರೆಸ್ ಗೆ ಬೇಕಿರಲಿಲ್ಲ. ಹೀಗಾಗಿ ಮಾಜಿ ದಿವಂಗತ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರು ಶಂಕುಸ್ಥಾಪನೆ ಮಾಡಿದ್ದ ನರ್ಮದಾ ನದಿ ಡ್ಯಾಂ ಅನ್ನು ಅರ್ಧಕ್ಕೆ ನಿಲ್ಲಿಸಿತ್ತು. ಈ ಡ್ಯಾಂ ಕಾರ್ಯವನ್ನು ಪೂರ್ಣಗೊಳಿಸಿದ್ದು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಂದರು.

ಗುಜರಾತ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಅಭಿವೃದ್ಧಿ ಸಾಧಿಸಿದೆ. ಕಾಂಗ್ರೆಸ್ ಸರ್ಕಾರವಿದ್ದಾಗ ಗುಜರಾತ್ ನಲ್ಲಿ ಯಾವುದೇ ಅಭಿವೃದ್ಧಿ ಆಗಿರಲಿಲ್ಲ. ಹೀಗಾಗಿ ಬಿಜೆಪಿ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಗುಜರಾತ್ ಜನರ ಬಳಿ ಹೋಗುತ್ತೇವೆ ಎಂದರು.

ದೇಶದ ಎಲ್ಲ ಕಡೆಯೂ ಕೇಸರಿ ಅಲೆ ಇದೆ. ಕೇಸರಿ ಅಲೆಯಿಂದಾಗಿ ನನಗೆ ಹೆಮ್ಮೆ ಎನಿಸಿದೆ. ಇನ್ನು ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಫಲಿತಾಂಶ ಎಲ್ಲರಿಗೂ ಅಚ್ಚರಿ ತಂದಿತ್ತು. ಗೆಲುವಿನ ಶ್ರೇಯಸ್ಸು ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರತಿಯೊಬ್ಬ ಕಾರ್ಯಕರ್ತನಿಗೂ ಸಲ್ಲುತ್ತದೆ. ನಮ್ಮದು ಕಾರ್ಯಕರ್ತರ ಪಕ್ಷ, ವಂಶಾಡಳಿತ ಪಕ್ಷವಲ್ಲ ಎಂದು ಹೇಳಿದರು.

Comments are closed.