ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಎಐಎಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಚುನಾವಣೆಗೂ ಮೊದಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ನೀಡುವ ಕುರಿತು ಚರ್ಚೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ.
ಈ ಹಿಂದೆ ಗುಜರಾತ್ ಚುನಾವಣೆ ಬಳಿಕ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗಾದಿ ನೀಡುವ ಕುರಿತು ಚರ್ಚೆ ನಡೆಸಲಾಗಿತ್ತು. ಆದರೆ ಬದಲಾದ ಪರಿಸ್ಥಿತಿಗಳಿಂದಾಗಿ ರಾಹುಲ್ ಗಾಂಧಿಗೆ ಗುಜರಾತ್ ಚುನಾವಣೆಗೂ ಮೊದಲೇ ಕಾಂಗ್ರೆಸ್ ಪಕ್ಷದ ಸಾರಥ್ಯ ವಹಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಪಕ್ಷದ ಈ ನಿರ್ಧಾರಕ್ಕೆ ಹಾಲಿ ಅಧ್ಯಕ್ಷೆ ಹಾಗೂ ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಅವರ ಅನಾರೋಗ್ಯ ಹಾಗೂ ಬದಲಾದ ರಾಹುಲ್ ಗಾಂಧಿ ವರ್ಚಸ್ಸೇ ಕಾರಣ ಎಂದು ಹೇಳಲಾಗಿದೆ.
ಹೀಗಾಗಿ ನಾಳೆ ದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ ಕಾಂಗ್ರೆಸ್ ಪಕ್ಷದ ಆಂತರಿಕ ಮೂಲಗಳು ತಿಳಿಸಿರುವಂತೆ ಈಗಾಗಲೇ ರಾಹುಲ್ ಗಾಂಧಿ ಅವರನ್ನು ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ನಾಳೆ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಅಧಿಕೃತವಾಗಿ ಪ್ರಸ್ತಾಪ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಅದರಂತೆ ಕಳೆದ 17 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಾರಥಿಯಾಗಿದ್ದ ಸೋನಿಯಾಗಾಂಧಿ ಅವರು ನಾಳೆ ರಾಹುಲ್ ಗಾಂಧಿ ಅವರಿಗೆ ತಮ್ಮ ಜವಾಬ್ದಾರಿಯನ್ನು ನೀಡಲಿದ್ದಾರೆ. ನಾಳಿನ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ 25 ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.