ಹೈದರಾಬಾದ್: 76 ವರ್ಷದ ವೃದ್ಧನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ನಿರಂತವಾಗಿ ಅತ್ಯಾಚಾರ ಮಾಡಿ ಆಕೆಯನ್ನು ಗರ್ಭಿಣಿ ಮಾಡಿರುವ ಘಟನೆ ತೆಲಂಗಾಣದ ಹೈದರಾಬಾದ್ ನಗರದ ಓಲ್ಡ್ ಸಿಟಿಯಲ್ಲಿ ನಡೆದಿದೆ.
ಆರೋಪಿಯನ್ನು ಅಬ್ದುಲ್ ವಹಾಬ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಗುರುವಾರ ಪೋಷಕರು ದೂರು ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ವಹಾಬ್ ಹಬೀಬ್ ನಗರದಲ್ಲಿರುವ ಅಘಪುರದಲ್ಲಿ ವಾಸಿಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ಪೋಷಕರ ದೂರಿನನ್ವಯ ನಾವು ಆರೋಪಿ ವಹಾಬ್ ನನ್ನು ಬಂಧಿಸಿದ್ದೇವೆ. ಸಂತ್ರಸ್ತೆ ಮತ್ತು ಆರೋಪಿ ಒಂದೇ ಪ್ರದೇಶದಲ್ಲಿ ವಾಸಿಸುತ್ತಿದ್ದರು. 2017ರ ಜೂನ್ ನಿಂದ ಸೆಪ್ಟೆಂಬರ್ ವರೆಗೆ ತಮ್ಮ ಮಗಳನ್ನು ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಪೋಷಕರು ತಿಳಿಸಿದ್ದಾರೆ.
ಸಂತ್ರಸ್ತೆಗೆ ಚಾಕ್ಲೇಟ್ ಮತ್ತು ತಿಂಡಿಗಳ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಾನೆ. ಈಗ ಸಂತ್ರಸ್ತೆ ಗರ್ಭಿಣಿಯಾಗಿದ್ದು, ತನ್ನ ಪೋಷಕರಿಗೆ ಹೊಟ್ಟೆ ನೋವು ಎಂದು ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದಾಗ ವಿಷಯ ತಿಳಿದಿದೆ. ಕೂಡಲೇ ಆರೋಪಿ ಬಗ್ಗೆ ತಿಳಿದುಕೊಂಡು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ ಎಂದು ಹಬೀಬ್ ನಗರ ಪೊಲೀಸ್ ಠಾಣೆಯ ಅಧಿಕಾರಿ ಮಧುಕರ್ ಸ್ವಾಮಿ ತಿಳಿಸಿದ್ದಾರೆ.
ಆರೋಪಿ ವಹಾಬ್ ನನ್ನು ಬಂಧಿಸಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಸ್ವಾಮಿ ಹೇಳಿದ್ದಾರೆ.