ರಾಷ್ಟ್ರೀಯ

ಭಾರತ್‌ ಬಂದ್‌: ಹಿಂಸಾರೂಪ ಪಡೆದ ದಲಿತ ಸಂಘಟನೆಗಳ ಪ್ರತಿಭಟನೆ; ಮಧ್ಯ ಪ್ರದೇಶದಲ್ಲಿ ಓರ್ವ ಸಾವು, ಕರ್ಫ್ಯೂ ಜಾರಿ

Pinterest LinkedIn Tumblr

ನವದೆಹಲಿ: ದೌರ್ಜನ್ಯ ತಡೆ ಕಾಯ್ದೆ–1989 ದುರ್ಬಲಗೊಳಿಸಿರುವುದನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಮಧ್ಯ ಪ್ರದೇಶದ ಮುರೇನಾ ಜಿಲ್ಲೆಯಲ್ಲಿ ಪ್ರತಿಭಟನಾಕಾರರೊಬ್ಬರು ಮೃತಪಟ್ಟಿದ್ದಾರೆ.

ಹಿಂಸಾಚಾರ ನಿಯಂತ್ರಣಕ್ಕಾಗಿ ಮಧ್ಯ ಪ್ರದೇಶದ ಗ್ವಾಲಿಯರ್‌, ಮುರೇನಾದಲ್ಲಿ ಕರ್ಪ್ಯೂ ಹಾಗೂ ಸಾಗರದಲ್ಲಿ ಸೆಕ್ಷನ್‌ 144 ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಪರಿಶಿಷ್ಟ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯದ ಬಗ್ಗೆ ದೂರು ನೀಡಿದ ಕೂಡಲೇ ಆರೋಪಿಗಳ ಬಂಧನ ಮತ್ತು ಪ್ರಕರಣ ದಾಖಲು ಅಗತ್ಯ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಇದನ್ನು ವಿರೋಧಿಸಿ ದಲಿತ ಸಂಘಟನೆಗಳು ಸೋಮವಾರ ಭಾರತ ಬಂದ್‌ಗೆ ಕರೆ ನೀಡಿದ್ದವು. ದೇಶದಾದ್ಯಂತ ಪ್ರತಿಭಟನೆ ಕಾವು ಹೆಚ್ಚುತ್ತಿದ್ದು, ಪ್ರತಿಭಟನಾಕಾರರು–ಪೊಲೀಸರ ನಡುವೆ ಘರ್ಷಣೆ ನಡೆದು ಹಲವು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಒತ್ತಾಯ ಪೂರ್ವಕವಾಗಿ ಪ್ರತಿಭಟನಾಕಾರರು ಅಂಗಡಿಗಳನ್ನು ಮುಚ್ಚಿಸಿದ್ದಾರೆ.

ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿರುವವರಿಗೆ ನಮಿಸಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ, ‘ತಮ್ಮ ಹಕ್ಕುಗಳ ರಕ್ಷಣೆಗಾಗಿ ಮೋದಿ ಸರ್ಕಾರದ ಮುಂದೆ ಬೇಡಿಕೆ ಇಟ್ಟು ರಸ್ತೆಗಿಳಿದು ಹೋರಾಟ ನಡೆಸುತ್ತಿರುವ ದಲಿತ ಸಮುದಾಯದ ಸಹೋದರ–ಸಹೋದರಿಯರಿಗೆ ನನ್ನ ನಮನ’ ಎಂದು ಟ್ವೀಟಿಸಿದ್ದಾರೆ.

ಜನರು ಪ್ರತಿಭಟನೆಯಲ್ಲಿ ವಿರೋಧ ಪಕ್ಷ ಇದರಲ್ಲಿ ರಾಜಕೀಯ ಮಾಡುತ್ತಿರುವುದು ಏಕೆ? ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಭಾರತ ರತ್ನ ನೀಡದ ಕಾಂಗ್ರೆಸ್‌ನಂತಹ ಪಕ್ಷಗಳು ಇದೀಗ ಅವರ ಅನುಯಾಯಿಗಳಂತೆ ನಟಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ರಾಮ್‌ವಿಲಾಸ್‌ ಪಾಸ್ವಾನ್‌ ಟೀಕಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಸ್‌ಸಿ, ಎಸ್‌ಟಿ ಸೇರಿ ಹಿಂದುಳಿದ ವರ್ಗಗಳ ಉನ್ನತಿಗಾಗಿ ಶ್ರಮಿಸುತ್ತಿದೆ. ಯಾರೊಬ್ಬರೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡ ಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮನವಿ ಮಾಡಿದ್ದಾರೆ.

* ಸುಪ್ರೀಂ ಕೋರ್ಟ್‌ನಲ್ಲಿ ತೀರ್ಪು ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ. ಎಲ್ಲ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳು ಶಾಂತಿ ಕಾಪಾಡುವಲ್ಲಿ ಸಹಕರಿಸಬೇಕು, ಹಿಂಸಾಚಾರಕ್ಕೆ ಪ್ರಚೋದನೆ ನೀಡಬಾರದು.

– ರಾಜನಾಥ ಸಿಂಗ್‌, ಕೇಂದ್ರ ಗೃಹ ಸಚಿವ

Comments are closed.