ರಾಷ್ಟ್ರೀಯ

ಅಪ್ರಾಪ್ತರ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

Pinterest LinkedIn Tumblr

ಹೊಸದಿಲ್ಲಿ: ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ಬರಲಿದೆ. ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲು ಕೇಂದ್ರ ಸರಕಾರ ನಿರ್ಧರಿಸಿದೆ.

ಈ ಸಂಬಂಧ ಶನಿವಾರ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸುಗ್ರೀವಾಜ್ಞೆಗೆ ತಿದ್ದುಪಡಿ ತರಲು ಅನುಮೋದನೆ ನೀಡಲಾಯಿತು.

ಐದು ದಿನಗಳ ವಿದೇಶ ಪ್ರವಾಸ ಮುಗಿಸಿ ಹೊಸದಿಲ್ಲಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೆಲವೇ ಗಂಟೆಗಳಲ್ಲಿ ನಡೆಸಿದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕಠುವಾ ಹಾಗೂ ಉತ್ತರ ಪ್ರದೇಶದ ಉನ್ನಾವೊದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

16 ವರ್ಷ ವಯಸ್ಸಿನ ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಜೀವಾವಧಿ ಶಿಕ್ಷೆ ಶಿಕ್ಷೆ ವಿಧಿಸಲು ಅನುಮತಿ ನೀಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶ ಇಲ್ಲ ಎಂದು ಕಾಯಿದೆಯಲ್ಲಿ ತಿಳಿಸಲಾಗಿದೆ.

ಇಂಥ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ.

ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ನಿಟ್ಟಿನಲ್ಲಿ ಮಕ್ಕಳನ್ನು ಲೈಂಗಿಕ ದೌರ್ಜನ್ಯಗಳಿಂದ ರಕ್ಷಿಸುವ ಪೋಕ್ಸೊ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ತಯಾರಿ ನಡೆಸಲಾಗಿದೆ.

ಪ್ರಸಕ್ತ ಇರುವ ಕಾನೂನಿನ ಪ್ರಕಾರ, ಯಾವುದೇ ಗಂಭೀರ ಲೈಂಗಿಕ ಅಪರಾಧಕ್ಕೂ ಗರಿಷ್ಠ ಜೀವನಪೂರ್ತಿ ಜೈಲು ಶಿಕ್ಷೆಯನ್ನಷ್ಟೇ ವಿಧಿಸಬಹುದು. ಕನಿಷ್ಠ ಶಿಕ್ಷೆ ಏಳು ವರ್ಷದ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಸುಗ್ರೀವಾಜ್ಞೆ ಹೊರಡಿಸುವ ಕುರಿತು ಕೇಂದ್ರ ಸರಕಾರ ಈಗಾಗಲೇ ಸುಪ್ರೀಂಕೋರ್ಟ್‌ಗೂ ಮಾಹಿತಿ ನೀಡಿದೆ.

Comments are closed.