ರಾಂಚಿ: ಮೇವು ಹಗರಣದ ನಾಲ್ಕು ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ರಾಂಚಿ ಕಾರಾಗೃಹದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾರ್ಖಂಡ್ ಹೈಕೋರ್ಟ್ 6 ವಾರಗಳ ಜಾಮೀನು ಮಂಜೂರು ಮಾಡಿದೆ.
ಶನಿವಾರ (ಮೇ 12) ರಂದು ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ವಿವಾಹ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಲಾಲು ಅವರಿಗೆ ಗುರುವಾರ 3 ದಿನಗಳ ಪೆರೋಲ್ ನೀಡಲಾಗಿತ್ತು. ಗುರುವಾರ ಸಂಜೆ ಅವರು ಪಟನಾದ ತಮ್ಮ ನಿವಾಸಕ್ಕೆ ಆಗಮಿಸಿದ್ದರು.
ಇದೇ ಸಂದರ್ಭದಲ್ಲಿ ಲಾಲು ಪರ ವಕೀಲರು ಅನಾರೋಗ್ಯದ ಹಿನ್ನೆಲೆಯಲ್ಲಿ ಲಾಲು ಪ್ರಸಾದ್ ಯಾದವ್ಗೆ 12 ವಾರಗಳ ಜಾಮೀನು ನೀಡುವಂತೆ ಕೋರಿ ಜಾರ್ಖಂಡ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಲಾಲುಗೆ 6 ವಾರಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿದೆ.
ಲಾಲು ಪ್ರಸಾದ್ ಯಾದವ್ಗೆ ಹೃದ್ರೋಗ, ಮೂತ್ರಪಿಂಡ ಸೋಂಕು, ಅಧಿಕ ರಕ್ತದೊತ್ತಡ, ಮಧುಮೇಹ ಸೇರಿ ಹಲವು ಆರೋಗ್ಯ ಸಮಸ್ಯೆ ಇರುವ ಕಾರಣ ಪೊಲೀಸರು ಕಳೆದ ಮಾರ್ಚ್ ತಿಂಗಳಿನಲ್ಲಿ ರಾಂಚಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಅವರ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಾರದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ರಿಮ್ಸ್ನ ವೈದ್ಯರು ಮಾ.29 ರಂದು ಶಿಫಾರಸು ಮಾಡಿದ್ದರು. ಅದರಂತೆ ಲಾಲು ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಏಮ್ಸ್ನಲ್ಲಿ ಅವರು ಚೇತರಿಸಿಕೊಂಡಿದ್ದ ಕಾರಣ ಮೇ. 1 ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದರು.
Comments are closed.