ರಾಷ್ಟ್ರೀಯ

ಆಷಾಡದ ಮಾಸದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ: ಸಿದ್ದರಾಮಯ್ಯ

Pinterest LinkedIn Tumblr


ದೆಹಲಿ: ಆಷಾಡ ಮಾಸದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಸೋಮವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕಿತ್ತು. ಆದರೆ ಆಷಾಡ ಮಾಸ ಬಂದದ್ದರಿಂದ ಮಾಡಲಾಗಲಿಲ್ಲ. ಆಷಾಡ ಮಾಸದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಜತೆ ಚರ್ಚೆ ನಡೆಸಿರುವುದಾಗಿ ತಿಳಿಸಿದರು.

ಉಳಿದಂತೆ ಮೊದಲ ಹಂತದಲ್ಲಿ 30 ನಿಗಮ ಮತ್ತು ಮಂಡಳಿಗಳಿಗೆ ನೇಮಕ ಮಾಡಲು ತಿರ್ಮಾನಿಸಲಾಗಿದ್ದು, ಕಾಂಗ್ರೆಸ್‌ಗೆ 20 ಮತ್ತು ಜೆಡಿಎಸ್‌ಗೆ 10 ಸ್ಥಾನಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು.

ಲೋಕಸಭೆ ಚುನಾವಣೆಯನ್ನು ಕಾಂಗ್ರೆಸ್​ ಮತ್ತು ಜೆಡಿಎಸ್​ ಒಟ್ಟಾಗಿ ಎದುರಿಸಲು ಮಾಡಿಕೊಳ್ಳುತ್ತಿರುವ ಮೈತ್ರಿ ಬಗ್ಗೆ ಪಕ್ಷದಲ್ಲಿ ಯಾರ ಆಕ್ಷೇಪವೂ ಇಲ್ಲ. ಮೈತ್ರಿಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಇನ್ನು ಪರಿಷತ್​ ಸಭಾಪತಿ ಸ್ಥಾನದ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಲೋಕಸಭೆ ಚುನಾವಣೆಯನ್ನು ಜೆಡಿಎಸ್-ಕಾಂಗ್ರೆಸ್ ಮೈತ್ರಿಯಾಗಿ ಎದುರಿಸಲಿವೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಕಾರ್ಯಾಕಾರಿ ಸಮಿತಿ ಸಭೆಯಲ್ಲಿ ಭಾನುವಾರ ಭಾಗವಹಿಸಿದ್ದ ಸಿದ್ದರಾಮಯ್ಯ, ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆಗಳ ಬಗ್ಗೆ ಚರ್ಚಿಸಲು ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು.

Comments are closed.