ರಾಷ್ಟ್ರೀಯ

ಕೇಂದ್ರದಿಂದ ಮೇಕೆದಾಟು ಯೋಜನೆ ಅಸ್ತು: ತಡೆಕೋರಿ ತಮಿಳುನಾಡು ಮುಖ್ಯಮಂತ್ರಿಯಿಂದ ಪ್ರಧಾನಿಗೆ ಪತ್ರ

Pinterest LinkedIn Tumblr


ಚೆನ್ನೈ: ಮೇಕೆದಾಟು ಯೋಜನೆಗೆ ಕೇಂದ್ರ ಜಲಸಂಪನ್ಮೂಲ ಇಲಾಖೆ ಒಪ್ಪಿಗೆ ಸೂಚಿಸಿದ್ದರ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಯೋಜನೆಯನ್ನು ತಡೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ತಮಿಳುನಾಡು ವಿರೋಧದ ನಡುವೆಯೂ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಕ್ಕಿತ್ತು. ಅಲ್ಲದೇ ಕೇಂದ್ರ ಜಲ ಸಂಪನ್ಮೂಲ ಇಲಾಖೆ ಯೋಜನೆಗೆ ಸಂಬಂಧಿಸಿದ ಪ್ರಾಥಮಿಕ ವರದಿಯನ್ನು ಸಿದ್ಧಪಡಿಸುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ಮಾಡಿತ್ತು. ಇದರ ಬೆನ್ನಲ್ಲೇ ತಮಿಳುನಾಡು ಮತ್ತೆ ಕ್ಯಾತೆ ಎತ್ತಿದೆ.

ಕೇಂದ್ರ ಜಲಸಂಪನ್ಮೂಲ ಇಲಾಖೆ ಯೋಜನೆಗೆ ಅಸ್ತು ಎಂದ ಬೆನ್ನಲ್ಲೆ ತಮಿಳುನಾಡು ಸಿಎಂ ಪಳನಿಸ್ವಾಮಿ ಮೇಕೆದಾಟು ಯೋಜನೆಯನ್ನು ತಡೆ ಹಿಡಿಯುವಂತೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ಸೂಚಿಸಿದೆ. ಆದರೆ ಇದು ತಮಿಳುನಾಡು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ. ಈ ಯೋಜನೆಯನ್ನು ಕರ್ನಾಟಕ ಕುಡಿಯುವ ನೀರಿಗಾಗಿ ಕೈಗೆತ್ತಿಕೊಂಡಿಲ್ಲ. ಇದರಿಂದಾಗಿ ಕಾವೇರಿ ಜಲಾನಯನ ಪ್ರದೇಶಕ್ಕೂ ಹಾನಿಯಾಗುತ್ತದೆ. ಇದಲ್ಲದೇ ಕಾವೇರಿ ನ್ಯಾಯಾಧೀಕರಣ ವಿರುದ್ಧದ ನಿಲುವಾಗಿದೆ. ಹೀಗಾಗಿ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಸೂಚಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಏನಿದು ಮೇಕೆದಾಟು ಯೋಜನೆ?
ಮೇಕೆದಾಟು ಬಳಿ ಕುಡಿಯುವ ನೀರಿನ ಯೋಜನೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ಕಿರು ಅಣೆಕಟ್ಟು ಕಟ್ಟಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಬಾರಿಯೂ ಕ್ಯಾತೆ ತೆಗೆಯುವ ತಮಿಳುನಾಡು ಈಗ ಮತ್ತೆ ಅಣೆಕಟ್ಟು ನಿರ್ಮಾಣ ಮಾಡುವುದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದೆ. ಅಷ್ಟೇ ಅಲ್ಲದೇ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಈ ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದೆ.

ಕರ್ನಾಟಕ ಸರ್ಕಾರ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ಹೊರಟ್ಟಿದ್ದು ಯಾಕೆ?
ಕಾವೇರಿ ನ್ಯಾಯಾಧೀಕರಣ ಐತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರತಿವರ್ಷ ಕರ್ನಾಟಕ 177 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಆದೇಶ ನೀಡಿದೆ. ಈ ನೀರಿನ ಜೊತೆಗೆ ಹೆಚ್ಚುವರಿಯಾಗಿ ಒಂದು ಅಂದಾಜಿನ ಪ್ರಕಾರ 80, 90 ಟಿಎಂಸಿ ನೀರು ತಮಿಳುನಾಡಿಗೆ ಸೇರುತ್ತದೆ. ಹೀಗೆ ರಾಜ್ಯದಿಂದ ಹರಿದು ಹೋಗುತ್ತಿರುವ ಈ ನೀರನ್ನು ಸಂಗ್ರಹಿಸಿ ಬೆಂಗಳೂರು ನಗರಕ್ಕೆ ಪೂರೈಕೆ ಮಾಡಲು ಕರ್ನಾಟಕ ಸರ್ಕಾರ ಅಣೆಕಟ್ಟು ನಿರ್ಮಿಸಲು ಹೊರಟಿದೆ.

ತಮಿಳುನಾಡು ವಿರೋಧ ಯಾಕೆ?
ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬೇಕೆಂಬ ಪ್ರಸ್ತಾಪ 1952ರಲ್ಲೇ ಚಿಗುರೊಡೆದಿತ್ತು. ಆದರೆ ಕೆಲ ಕಾರಣಗಳಿಂದ ಈ ಯೋಜನೆಯನ್ನು ಸರ್ಕಾರ ಕೈಬಿಟ್ಟಿತ್ತು. 1996ರಲ್ಲಿ ಮೇಕೆದಾಟುವಿನಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿ ಕೇಂದ್ರ ವಿದ್ಯುತ್ ಪ್ರಾಧಿಕಾರಕ್ಕೆ ಅನುಮೋದನೆಗೆ ಕಳುಹಿಸಿಕೊಟ್ಟಿತ್ತು. ಆದರೆ ಇದೇ ಸಮಯದಲ್ಲಿ ಕಾವೇರಿ ವಿವಾದ ನ್ಯಾಯಾಧೀಕರಣ ಮುಂದೆ ಇದ್ದ ಕಾರಣ ಮೊದಲು ಈ ವಿವಾದವನ್ನು ಬಗೆಹರಿಸಿಕೊಳ್ಳಿ, ನಂತರ ಈ ವಿಚಾರವನ್ನು ಪ್ರಸ್ತಾಪ ಮಾಡಿ ಎಂದು ಹೇಳುವ ಮೂಲಕ ವಿದ್ಯುತ್ ಪ್ರಾಧಿಕಾರ ಉಪಾಯದಿಂದ ಜಾರಿಕೊಂಡಿತ್ತು.

2007ರಲ್ಲಿ ನ್ಯಾಯಾಧೀಕರಣ ಅಂತಿಮ ತೀರ್ಪು ಪ್ರಕಟಿಸಿದ ಬಳಿಕ ಮತ್ತೆ ಮೇಕೆದಾಟು ಯೋಜನೆ ಗರಿಗೆದರತೊಡಗಿತು. ಅಂತಿಮವಾಗಿ 2013ರಲ್ಲಿ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ನಿರ್ಮಿಸಲು ಮಹತ್ವದ ಹೆಜ್ಜೆ ಇಟ್ಟಿತು. ರಾಜ್ಯ ಸರ್ಕಾರ ಅಣೆಕಟ್ಟು ನಿರ್ಮಿಸಲು ಮುಂದಾಗುತ್ತಿದ್ದಂತೆ ಆಗಿನ ತಮಿಳುನಾಡು ಸಿಎಂ ಜಯಲಲಿತಾ ಕೇಂದ್ರದ ಮೊರೆ ಹೋಗಿ, ಸುಪ್ರೀಂನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಈಗ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧವಾಗುತ್ತಿದ್ದು ತಮಿಳುನಾಡು ಸಿಎಂ ಪಳನಿಸ್ವಾಮಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

Comments are closed.