ರಾಷ್ಟ್ರೀಯ

ಭಾರತೀಯ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಮೂವರ ವಿರುದ್ಧ ಪಿಐಎಲ್​

Pinterest LinkedIn Tumblr


ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ರದ್ದುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ. ಇದನ್ನು ವಿರೋಧಿಸಿ ಹೇಳಿಕೆ ನೀಡಿದ್ದಲ್ಲದೆ, ಭಾರತದ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಜಮ್ಮು ಮತ್ತು ಕಾಶ್ಮೀರದ ಮೂವರು ಮುಖಂಡರ ವಿರುದ್ಧ ದೆಹಲಿ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಫಾರೂಕ್​ ಅಬ್ದುಲ್ಲಾ, ಓಮರ್​ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಆದರೆ, ಈ ಮೂವರು ಮುಖಂಡರು ಭಾರತೀಯ ಸಂವಿಧಾನದ 370 ಮತ್ತು 35ಎ ವಿಧಿಗಳನ್ನು ರದ್ದುಗೊಳಿಸುವ ವಿಷಯವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ, ಈ ಮೂವರು ಮುಖಂಡರ ನಾಮಪತ್ರಗಳನ್ನು ತಿರಸ್ಕರಿಸಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಬಂಧಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದ ಈ ಮೂವರು ಮುಖಂಡರು ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ಹೇಗೆ ರದ್ದು ಮಾಡುತ್ತಾರೋ ನೋಡಿಕೊಳ್ಳುತ್ತೇವೆ. ಒಂದು ವೇಳೆ ರದ್ದು ಮಾಡಿದರೆ ಅದರ ವಿರುದ್ಧ ಹೋರಾಟ ಮಾಡುತ್ತೇವೆ. ಇದಕ್ಕೂ ಮಣಿಯದಿದ್ದರೆ ಭಾರತದಿಂದಲೇ ಪ್ರತ್ಯೇಕಗೊಳ್ಳುತ್ತೇವೆ ಎಂದು ಹೇಳಿದ್ದರು.

Comments are closed.