ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಆಂಧ್ರ ನಿಯೋಜಿತ ಸಿಎಂ ಜಗನ್ ಮೋಹನ್ ರೆಡ್ಡಿ

Pinterest LinkedIn Tumblr

ನವದೆಹಲಿ: ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಭಾನುವಾರ ನಿಯೋಜಿತ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

175 ಸದಸ್ಯಬಲದ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 151 ಸೀಟುಗಳನ್ನು ಮತ್ತು 25 ಲೋಕಸಭಾ ಸ್ಥಾನಗಳ ಪೈಕಿ 22 ಸೀಟುಗಳನ್ನು ಗೆದ್ದುಕೊಂಡ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಬಿಜೆಪಿಗೆ ಬಾಹ್ಯ ಬೆಂಬಲ ಅಥವಾ ವಿಷಯಾಧಾರಿತ ಬೆಂಬಲ ನೀಡುವ ಬಗ್ಗೆ ನರೇಂದ್ರ ಮೋದಿ ಜತೆ ಮಾತುಕತೆ ನಡೆಸಿದರು.

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಭರವಸೆ ನೀಡಿದ ಪಕ್ಷಕ್ಕೆ ನಾವು ಬೆಂಬಲ ಸೂಚಿಸುತ್ತೇವೆ ಎಂದು ತಮ್ಮ ಚುನಾವಣಾ ರ್ಯಾಲಿಯಲ್ಲಿ ಮುಖ್ಯಮಂತ್ರಿ ನಿಯೋಜಿತ ಜಗನ್ ಮೋಹನ್ ರೆಡ್ಡಿ ಹೇಳಿದ್ದರು.

ಇಬ್ಬರೂ ನಾಯಕರು ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಮತ್ತು ತೆಲುಗು ರಾಜ್ಯಗಳ ಅಭಿವೃದ್ಧಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಮೇ 30ರಂದು ಜಗನ್ ಮೋಹನ್ ರೆಡ್ಡಿ ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು ಅದಕ್ಕೆ ಕೆ ಸಿ ಆರ್ ಚಂದ್ರಶೇಖರ್ ಅವರಿಗೆ ಆಹ್ವಾನ ನೀಡಲಾಗಿದೆ.

ಚಂದ್ರಬಾಬು ನಾಯ್ಡು ಅವರು ರಾಜ್ಯಪಾಲ ನರಸಿಂಹನ್ ಅವರಿಗೆ ಕಳೆದ ಗುರುವಾರ ರಾಜೀನಾಮೆ ಸಲ್ಲಿಸಿದ್ದರು.14ನೇ ಆಂಧ್ರ ಪ್ರದೇಶ ವಿಧಾನಸಭೆಯನ್ನು ನಿನ್ನೆ ರಾಜ್ಯಪಾಲರು ವಿಸರ್ಜಿಸಿದ್ದರು.

Comments are closed.