ನವದೆಹಲಿ(ಜೂನ್ 17): ಕೇಂದ್ರದಲ್ಲಿ ಸತತ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಮೊದಲ ಸಂಸತ್ ಕಲಾಪ ಶುರುವಾಗಿದೆ. ಇತ್ತೀಚೆಗಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಕೂಡ ಸಂಸತ್ ಪ್ರವೇಶಿಸಿ ಆಗಿದೆ. ಈ ಮಧ್ಯೆ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕಾರದ ವೇಳೆ ಕರ್ನಾಟಕ ಸಂಸದರು, ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಕನ್ನಡಾಭಿಮಾನ ಮೆರೆದಿದ್ದಾರೆ ಎಂಬುದು ವಿಶೇಷ.
ಬೆಂಗಳೂರು ಉತ್ತರದಿಂದ ಸತತ ಮೂರನೇ ಬಾರಿಗೆ ಆಯ್ಕೆಯಾಗಿರುವ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಮೊದಲಿಗೆ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಮಾದರಿಯಾದರು. ಅದಾದ ನಂತರದಲ್ಲಿ ಧಾರವಾಡ ಸಂಸದ ಮತ್ತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಕೂಡ ಅದೇ ರೀತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ನಂತರ ಇವರಂತೆಯೇ ಮಂಡ್ಯದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್, ಪ್ರತಾಪ್ ಸಿಂಹ, ಯುವ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇತರ ರಾಜ್ಯದ ಸಂಸದರೂ ಕೂಡ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿ ಲೋಕಸಭೆಯಲ್ಲಿ ಇತಿಹಾಸ ಸೃಷ್ಟಿಸಿದರು. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಕೂಡ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದರು.
ಈ ಮುನ್ನವೇ ನಿಯಮಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ವಾರಾಣಸಿಯ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಾಗೆಯೇ ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಿದರು. ನಂತರ ಸಚಿವರು ಹಾಗೂ ಇನ್ನಿತರ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
Comments are closed.