ರಾಷ್ಟ್ರೀಯ

ಶೀಘ್ರವೇ ಸರ್ಕಾರ ರಚನೆ; ಅಮಿತ್ ಶಾ ಭೇಟಿ ನಂತರ ಫಡ್ನವೀಸ್

Pinterest LinkedIn Tumblr


ನವದೆಹಲಿ: ಮಹಾರಾಷ್ಟ್ರದಲ್ಲಿ ಸರಕಾರ ರಚಿಸುವ ನಿಟ್ಟಿನಲ್ಲಿ ಬಿಜೆಪಿ, ಶಿವಸೇನಾದ ನಡುವೆ ತಿಕ್ಕಾಟ ಮುಂದುವರಿದಿರುವ ನಡುವೆಯೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೋಮವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಶಾ ಜತೆಗಿನ ಮಾತುಕತೆ ಬಳಿಕ ಸರಕಾರ ರಚನೆಗೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಫಡ್ನವೀಸ್, ಯಾರು ಏನು ಹೇಳಿದರು? ಹಲವಾರು ಜನರು ಮಾತನಾಡುತ್ತಿದ್ದಾರೆ. ಆದರೆ ನಾನು ಬಿಜೆಪಿ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡೋದಿಲ್ಲ. ಮಹಾರಾಷ್ಟ್ರದಲ್ಲಿ ಶೀಘ್ರದಲ್ಲಿಯೇ ಬಿಜೆಪಿ ನೇತೃತ್ವದ ನೂತನ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಬಗ್ಗೆ ನನಗೆ ವಿಶ್ವಾಸವಿದೆ ಎಂದರು.

ರಾಜ್ಯದಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಭಾರೀ ನಷ್ಟ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಹೆಚ್ಚಿನ ಪರಿಹಾರ ನೀಡುವ ಬಗ್ಗೆ ಚರ್ಚಿಸಲು ದೆಹಲಿಗೆ ಆಗಮಿಸಿರುವುದಾಗಿ ಫಡ್ನವೀಸ್ ಈ ಸಂದರ್ಭದಲ್ಲಿ ತಿಳಿಸಿದರು.

ರಾಜ್ಯದಲ್ಲಿ ಮಳೆಯಿಂದ ತೊಂದರೆಗೊಳಗಾದ ರೈತರಿಗೆ 10ಸಾವಿರ ಕೋಟಿ ರೂಪಾಯಿ ಪರಿಹಾರ ನೀಡಲು ಈಗಾಗಲೇ ಅನುಮತಿ ನೀಡಲಾಗಿದೆ. ನಮ್ಮ ಸರ್ಕಾರ ಸದಾ ರೈತರ ಬೆಂಬಲಕ್ಕೆ ನಿಲ್ಲಲಿದೆ ಎಂದು ಫಡ್ನವೀಸ್ ಹೇಳಿದರು.

Comments are closed.