
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕಾವು ದಿನೇ ದಿನೇ ಹೆಚ್ಚುತ್ತಲೇ ಇದೆ. ಈ ಮಧ್ಯೆ ಪ್ರತಿಭಟನೆಯಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆ ಆಗಿದೆ.
ಪೌರತ್ವ ತಿದ್ದುಪಡಿ ಮಸೂದೆಗೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿತ್ತು. ಇದನ್ನು ಖಂಡಿಸಿ ಅಸ್ಸಾಂನಲ್ಲಿ ಬೃಹತ್ ಪ್ರತಿಭಟನೆ ಆರಂಭವಾಗಿದೆ. ಗುರುವಾರ ಪ್ರತಿಭಟನಾನಿರತರ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು. ಈ ವೇಳೆ ಇಬ್ಬರು ಬಲಿಯಾಗಿದ್ದರು. ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಈಗ ಮೂವರು ಮೃತಪಟ್ಟಿದ್ದಾರೆ.
ಪೊಲೀಸರ ಗುಂಡಿನ ದಾಳಿಗೆ ಸ್ಥಳದಲ್ಲೇ ಓರ್ವ ಪ್ರತಿಭಟನಕಾರ ಮೃತಪಟ್ಟಿದ್ದರೆ, ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದರು. ಇಂದು ಮತ್ತೋರ್ವ ಪ್ರತಿಭಟನಾಕಾರ ಮೃತಪಟ್ಟಿದ್ದಾನೆ. ಈ ಮೂಲಕ ಸಾವಿನ ಸಂಖ್ಯೆ 5ಕ್ಕೆ ಏರಿಕೆ ಆಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಸ್ಸಾಂ ಹಾಗೂ ತ್ರಿಪುರಾದಲ್ಲಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆ ಈಗ ಪಶ್ಚಿಮಬಂಗಾಳಕ್ಕೂ ವ್ಯಾಪಿಸಿದೆ. ಅಲ್ಲದೆ, ಮೇಘಾಲಯ, ದೆಹಲಿ, ಅರುಣಾಚಲ ಪ್ರದೇಶದಲ್ಲೂ ಪ್ರತಿಭಟನೆ ನಡೆಯುತ್ತಿದೆ.
ಭಾರೀ ವಿವಾದ ಸೃಷ್ಟಿಸಿರುವ ಪೌರತ್ವ ತಿದ್ದುಪಡಿ ಮಸೂದೆ ಬುಧವಾರ ರಾಜ್ಯಸಭೆಯಲ್ಲಿ ಎಂಟು ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ಅನುಮೋದನೆ ಪಡೆದುಕೊಂಡಿತ್ತು. ವಿರೋಧ ಪಕ್ಷಗಳ ವಿರೋಧದ ನಡುವೆಯೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಿದ ರಾಜ್ಯಸಭೆ, ಮಸೂದೆಯನ್ನು ಆಯ್ಕೆ ಸಮಿತಿಗೆ ಕಳುಹಿಸಿಕೊಟ್ಟಿತ್ತು. ಮಸೂದೆಯ ಪರವಾಗಿ 125 ಸದಸ್ಯರು ಮತ ಹಾಕಿದರೆ, ಮಸೂದೆ ವಿರುದ್ಧವಾಗಿ 105 ಮತಗಳು ಚಲಾವಣೆಯಾಗಿದ್ದವು.
Comments are closed.