ರಾಷ್ಟ್ರೀಯ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು! ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚೋಪ್ರಾ ರಾಜೀನಾಮೆ

Pinterest LinkedIn Tumblr


ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಒಂದೂ ಸ್ಥಾನದಲ್ಲಿ ಗೆಲುವು ಸಾಧಿಸದೇ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತ ದೆಹಲಿ ಕಾಂಗ್ರೆಸ್ ಘಟಕದ ಅಧ್ಯಕ್ಷ ಸುಭಾಶ್ ಚೋಪ್ರಾ ರಾಜೀನಾಮೆ ನೀಡಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನದ ನಿಟ್ಟಿನಲ್ಲಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕಳುಹಿಸಿರುವುದಾಗಿ ಚೋಪ್ರಾ ತಿಳಿಸಿದ್ದಾರೆ.

2015ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿಯೂ 70 ಕ್ಷೇತ್ರಗಳಲ್ಲಿ ಒಂದೇ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿರಲಿಲ್ಲವಾಗಿತ್ತು. 2020ರ ಚುನಾವಣೆಯಲ್ಲಿಯೂ ಶೂನ್ಯ ಸಂಪಾದನೆ ಮೂಲಕ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿತ್ತು.

ಭಾರೀ ಜಾಹೀರಾತುಗಳ ಮೂಲಕ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಅವರು ಮತದಾರರ ಮೇಲೆ ಪ್ರಭಾವ ಬೀರಿರುವುದಾಗಿ ಚೋಪ್ರಾ ಈ ಸಂದರ್ಭದಲ್ಲಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಇಂತಹ ರಾಜಕಾರಣವನ್ನು ನಾನೆಂದೂ ನೋಡಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Comments are closed.