ರಾಷ್ಟ್ರೀಯ

ಆಂಧ್ರದ ವಿಶಾಖಪಟ್ಟಣದಲ್ಲಿ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ; ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆ

Pinterest LinkedIn Tumblr

ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಇಂದು ಮುಂಜಾನೆ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ ಹರಡಿದೆ. ಪರಿಣಾಮ ಬೆಳಗ್ಗೆ ವಾಕಿಂಗ್ ಗೆ ಮತ್ತು ಇತರೆ ಕಾರ್ಯಗಳಿಗೆ ಬಂದವರು ವಿಷಾನಿಲವನ್ನು ಉಸಿರಾಡಿ ಕೂಡಲೇ ಅಸ್ವಸ್ಥರಾಗಿದ್ದಾರೆ. ಈ ದುರ್ಘಟನೆಯಲ್ಲಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಇಬ್ಬರು ವೃದ್ಧರು, 7 ವರ್ಷದ ಬಾಲಕಿ ಸೇರಿದಂತೆ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಐದು ಮಂದಿ ಆಸ್ಪತ್ರೆಗೆ ಸೇರಿಸುವ ಮುನ್ನವೇ ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

ಅಸ್ವಸ್ಥರನ್ನು ವಿಶಾಖಪಟ್ಟದ ಕಿಂಗ್ ಜಾರ್ಜ್ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇದೊಂದು ಆಸ್ಪತ್ರೆಯಲ್ಲೇ ಸುಮಾರು 180ಕ್ಕೂ ಅಧಿಕ ಮಂದಿ ಅಸ್ವಸ್ಥರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವಿಷಾನಿಲ ಸೋರಿಕೆಯಿಂದಾಗಿ ಕಾರ್ಖಾನೆಯ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಯಾಗಿದ್ದು, ಗೋಪಾಲಪಟ್ಟಣಂ ಸುತ್ತಲಿನ ಐದು ಗ್ರಾಮಗಳಲ್ಲಿನ ಜನರಿಗೆ ಉಸಿರಾಟದ ತೊಂದರೆ ಮತ್ತು ಗಂಟಲು ಕೆರೆತ ಸಮಸ್ಯೆ ಆರಂಭವಾಗಿದೆ. ನೂರಾರು ಮಂದಿ ಉಸಿರಾಟದ ಸಮಸ್ಯೆ, ಗಂಟಲು ನೋವು, ಕಣ್ಣಿನ ಉರಿ, ಹೊಟ್ಟೆ ನೋವು, ಇತರೆ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ರವಾನಿಸಲು ಇದೀಗ ಆ್ಯಂಬುಲೆನ್ಸ್ ಗಳನ್ನು ಮತ್ತು ಸರ್ಕಾರಿ ಸಾರಿಗೆ ಬಸ್ ಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.

ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ
ಇನ್ನು ವಿಶಾಖಪಟ್ಟಣಂ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ ಸೂಚಿಸಿದ್ದು, ದುರಂತದ ಕುರಿತು ತನಿಖೆಗೆ ಆದೇಶಿಸಲಾಗಿದೆ. ಈ ಕುರಿತಂತೆ ನಾನು ಆಂಧ್ರ ಪ್ರದೇಶ ಮುಖ್ಯ ಕಾರ್ಯದರ್ಶಿಗಳು ಮತ್ತು ಆಂಧ್ರ ಪ್ರದೇಶ ಪೊಲೀಸ್ ಡಿಜಿಪಿ ಅವರೊಂದಿಗೆ ಮಾತನಾಡಿದ್ದೇನೆ. ಪರಿಸ್ಥಿತಿ ನಿಯಂತ್ರಿಸಲು ಬೇಕಾದ ಎಲ್ಲ ನೆರವು ಕೇಂದ್ರ ಸರ್ಕಾರದಿಂದ ದೊರೆಯಲಿದೆ ಎಂದು ಹೇಳಿದ್ದೇನೆ ಎಂದು ಹೇಳಿದ್ದಾರೆ.

ಅಂತೆಯೇ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಿಜಕ್ಕೂ ಈ ದುರಂತ ದುರದೃಷ್ಟಕರವಾದದ್ದು ಎಂದು ಹೇಳಿದ್ದಾರೆ.

Comments are closed.