ರಾಷ್ಟ್ರೀಯ

ದೇಶದಲ್ಲಿ ಇಂದು (ಬುಧವಾರ) 18,653 ಕೊರೋನಾ ಪ್ರಕರಣಗಳು ಪತ್ತೆ: 507 ಸಾವು

Pinterest LinkedIn Tumblr


ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,653 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5,85,493ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.

ಇನ್ನು ನಿನ್ನೆ ಒಂದೇ ದಿನ ಮಹಾಮಾರಿ ವೈರಸ್ ಬರೋಬ್ಬರಿ 507 ಮಂದಿಯನ್ನು ಬಲಿಪಡೆದುಕೊಂಡಿದ್ದು, ಈ ವರೆಗೂ ವೈರಸ್’ನಿಂದ ಸಾವನ್ನಪ್ಪಿದವರ ಸಂಖ್ಯೆ 17,400ಕ್ಕೆ ತಲುಪಿದೆ.

ಇನ್ನು 5,85,493 ಮಂದಿ ಸೋಂಕಿತರ ಪೈಕಿ 3,47,979 ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ದೇಶದಲ್ಲಿನ್ನೂ 2,20,114 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಸಚಿವಾಲಯ ತಿಳಿಸಿದೆ.

ಈ ನಡುವೆ ತಮಿಳುನಾಡು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 90,167ಕ್ಕೆ ಏರಿಕೆಯಾಗಿದ್ದು, 1,201 ಮಂದಿ ಬಲಿಯಾಗಿದ್ದಾರೆಂದು ತಿಳಿದುಬಂದಿದೆ.

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,17,931 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,17,931 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜೂನ್ 30ರವರೆಗೂ 86,26,585 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

Comments are closed.