ರಾಷ್ಟ್ರೀಯ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು; ಉಪಮುಖ್ಯಮಂತ್ರಿ, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಸಚಿನ್ ಪೈಲಟ್ ವಜಾ

Pinterest LinkedIn Tumblr

ನವದೆಹಲಿ: ರಾಜಸ್ಥಾನ ರಾಜ್ಯ ಕಾಂಗ್ರೆಸ್’ನಲ್ಲಿ ರಾಜಕೀಯ ಬಿಕ್ಕಟ್ಟು ತಾರಕ್ಕೇರಿರುವ ನಡುವಲ್ಲೇ ರಾಜಸ್ಥಾನ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ವಜಾಗೊಳಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಬಂಡಾಯ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಕುರಿತು ಇಂದು ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಬೆಯಲ್ಲಿ ಈ ಕಠಿಣ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೆ ಸಚಿನ್ ಪೈಲಟ್ ಅವರು ಗೈರು ಹಾಜರಾಗಿದ್ದರು. ಇದರಂತೆ ಸಭೆಯಲ್ಲಿ ಸಚಿನ್ ಪೈಲಟ್ ಅವರನ್ನು ಉಪ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಪೈಲಟ್ ಅವರ ಜೊತೆಗೆ ಬಂಡಾಯ ಸಾರಿದ್ದ ಮತ್ತಿಬ್ಬರು ಸಚಿವರನ್ನೂ ಕೂಡ ಉಚ್ಛಾಟಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಸಚಿನ್ ಪೈಲಟ್, ವಿಶ್ವೇಂದ್ರ ಸಿಂಗ್ ಹಾಗೂ ರಮೇಶ್ ಮೀನಾ ಅವರನ್ನು ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಸಚಿನ್ ಪೈಲಟ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಸಚಿನ್ ಪೈಲಟ್ ಅವರಿದ್ದ ಸ್ಥಾನಕ್ಕೆ ಇದೀಗ ಗೋವಿಂದ್ ಸಿಂಗ್ ದೋತ್ಸ್ರಾ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಚಿನ್ ಪೈಲಟ್ ಹಾಗೂ ಕೆಲ ಸಚಿವರು ಹಾಗೂ ಶಾಸಕರು ಬಿಜೆಪಿ ಆಮಿಷ ಹಾಗೂ ಬೆಲೆಗೆ ಸಿಕ್ಕಿಕೊಂಡಿದ್ದು, ಈ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆಂದು ಇದೇ ವೇಳೆ ಆರೋಪಿಸಿದ್ದಾರೆ.

15ಕ್ಕೂ ಹೆಚ್ಚು ಶಾಸಕರನ್ನು ತಮ್ಮೊಂದಿಗೆ ಕರೆದೊಯ್ದು ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಸಚಿನ್ ಪೈಲಟ್ ಅವರ ನಡೆಗೆ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಇಕ್ಕಟ್ಟಿಗೆ ಸಿಲುಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಶಾಸಕಾಂಗ ಪಕ್ಷದ ಕರೆದಿತ್ತು. ಸಭೆಗೆ ಸಚಿನ್ ಪೈಲಟ್ ಅವರಿಗೂ ಆಹ್ವಾನ ನೀಡಲಾಗಿತ್ತು.

ಆದರೆ, ಸಭೆಗೆ ಸಚಿನ್ ಪೈಲಟ್ ಅವರು ಗೈರು ಹಾಜರಾಗಿತ್ತು. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಪಕ್ಷದಿಂದ ಸಚಿನ್ ಅವರನ್ನು ಹೊರಹಾಕಬೇಕೆಂದು ಸಭೆಯಲ್ಲಿ ಭಾಗವಹಿಸಿದ್ದ 102 ಶಾಸಕರು ಒತ್ತಾಯಿಸಿದ್ದರು ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಇದೀಗ ಸಚಿನ್ ಪೈಲಟ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Comments are closed.