ರಾಷ್ಟ್ರೀಯ

ಕೇರಳ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ತಲಾ 10 ಲಕ್ಷ ಪರಿಹಾರ !

Pinterest LinkedIn Tumblr

ಕಲ್ಲಿಕೋಟೆ: ಕೇರಳ ನಾಗರಿಕ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ತಲಾ 10 ಲಕ್ಷ ಪರಿಹಾರ ನೀಡುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ದುಬೈಯಿಂದ ಮರಳಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು (ಐಎಕ್ಸ್‌ 1344) ಕೋಯಿಕ್ಕೋಡ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿ ಸಮೀಪದ ಕಣಿವೆಗೆ ಬಿದ್ದು ಎರಡು ಹೋಳಾಗಿತ್ತು. ಶುಕ್ರವಾರ ಸಂಜೆ 7.40ಕ್ಕೆ ನಡೆದ ಅವಘಡದಲ್ಲಿ 18 ಮಂದಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಇಂದು ವಿಮಾನ ದುರಂತ ಸಂಭವಿಸಿದ ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್‌ ಸಿಂಗ್ ಪುರಿ ಶನಿವಾರ ಭೇಟಿ ನೀಡಿದರು.

ಭೇಟಿ ನೀಡಿದ ಬಳಿಕ ಮಾತನಾಡಿರುವ ಹರ್‌ದೀಪ್‌ ಸಿಂಗ್‌ ಪುರಿ, ‘ಅಪಘಾತಕ್ಕೆ ಈಡಾಗಿರುವ ವಿಮಾನದ ಡಿಜಿಟಲ್ ಫ್ಲೈಟ್ ಡಾಟಾ ರೆಕಾರ್ಡರ್ ಮತ್ತು ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್‌ಗಳನ್ನು ಪತ್ತೆಹಚ್ಚಿ ವಶಪಡೆಯಲಾಗಿದೆ. ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ತನಿಖೆ ನಡೆಸುತ್ತಿದೆ. ವಿಮಾನ ದುರಂತ ನಂತರದ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಮತ್ತು ಮುಂದಿನ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಲು ಇಲ್ಲಿಗೆ ಬಂದಿದ್ದೇನೆ. ಹಿರಿಯ ನಾಗರಿಕ ವಿಮಾನಯಾನ ಅಧಿಕಾರಿಗಳು ಮತ್ತು ವೃತ್ತಿಪರರೊಂದಿಗೆ ಸಮಾಲೋಚನೆ ನಡೆಸಲಿದ್ದೇನೆ ಎಂದು ಹರ್ದೀಪ್‌ ಸಿಂಗ್‌ ಹೇಳಿದ್ದಾರೆ.

ಪರಿಹಾರ ಘೋಷಣೆ
ಇದೇ ವೇಳೆ ಸಂತ್ರಸ್ಥರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಮಾತನಾಡಿದ ಅವರು, ದುರಂತದಲ್ಲಿ ಸಾವನ್ನಪ್ಪಿದವರಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುತ್ತದೆ. ಅಂತೆಯೇ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂ, ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 50 ಸಾವಿರ ರೂ ನೀಡುವುದಾಗಿ ಹೇಳಿದರು.

ಕೇರಳ ಸರ್ಕಾರದಿಂದಲೂ 10 ಲಕ್ಷ ರೂ ಪರಿಹಾರ ಘೋಷಣೆ
ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿದ ಬೆನ್ನಲ್ಲೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರೂ ಕೂಡ ವಿಮಾನ ದುರಂತ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಟ್ವೀಟ್ ಮಾಡಿದೆ.

Comments are closed.