ರಾಷ್ಟ್ರೀಯ

ದೇಶದಲ್ಲಿ ಏರಿಕೆಯಾಗುತ್ತಿರುವ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ; 24 ತಾಸುಗಳ ಅವಧಿಯಲ್ಲಿ 25,320 ಹೊಸ ಪ್ರಕರಣಗಳು ದಾಖಲು

Pinterest LinkedIn Tumblr

ನವದೆಹಲಿ: ದೇಶದಲ್ಲಿ ಹೊಸ ಕೊರೋನಾ ಪ್ರಕರಣಗಳ ಸಂಖ್ಯೆ ದಿನಕಳೆದಂತೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ 25,320 ಹೊಸ ಪ್ರಕರಣಗಳು ದಾಖಲಾಗಿವೆ. ಇದು 84 ದಿನಗಳಲ್ಲೇ (ಈ ವರ್ಷದಲ್ಲೇ) ಗರಿಷ್ಠ ಪ್ರಮಾಣವಾಗಿದೆ.

ಇದೇ ವೇಳೆ ಸಕ್ರಿಯ ಸೋಂಕಿತರ ಪ್ರಮಾಣ 2.10 ಲಕ್ಷಕ್ಕೆ ಹೆಚ್ಚಳವಾಗಿದೆ. ಕಳೆದ ವರ್ಷ ಡಿಸೆಂಬರ್ 20 ರಂದು ದೇಶದಲ್ಲಿ 26,264 ಪ್ರಕರಣಗಳು ಪತ್ತೆಯಾಗಿದ್ದವು.

ಇದೇ ವೇಳೆ ಭಾನುವಾರ 161 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 1,58,607ಕ್ಕೆ ಏರಿಕೆಯಾಗಿದೆ. ಜೊತೆಗೆ ಒಟ್ಟು ಸೋಂಕಿತರ ಸಂಖ್ಯೆ 1,13,59,048ಕ್ಕೆ ತಲುಪಿದ್ದು, 1,09,89,897 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಇನ್ನು ಭಾರತದಲ್ಲಿ ಒಂದೇ ದಿನ 8,64,368 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 22,67,03,641 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 2,97,38,409 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Comments are closed.