ರಾಷ್ಟ್ರೀಯ

ಭಾರತದಲ್ಲಿ 24 ಗಂಟೆಗಳ ಅವಧಿಯಲ್ಲಿ 3,32,730 ಹೊಸ ಪ್ರಕರಣಗಳು ಪತ್ತೆ: 2,263 ಮಂದಿ ಬಲಿ; ಆತಂಕದಲ್ಲಿ ಜನ

Pinterest LinkedIn Tumblr

ನವದೆಹಲಿ: ಕೊರೋನಾ ವೈರಸ್ ಮಹಾಮಾರಿ ಭಾರತದಲ್ಲಿ ಮತ್ತೊತಂದು ಜಾಗತಿಕ ದಾಖಲೆ ಸೃಷ್ಟಿಸಿದೆ. ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 3,32,730 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,62,63,695ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,263 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,86,920ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,28,616ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,93,279 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,36,48,159ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ ದಿನ 17,40,550 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 27,44,45,653 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗುತ್ತಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 13,54,78,420 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Comments are closed.