ರಾಷ್ಟ್ರೀಯ

ಗೋವನ್ನು ‘ರಾಷ್ಟ್ರೀಯ ಪ್ರಾಣಿ’ ಎಂದು ಘೋಷಿಸಬೇಕು: ಅಲಹಾಬಾದ್ ಹೈಕೋರ್ಟ್

Pinterest LinkedIn Tumblr

ಅಲಹಾಬಾದ್: ಗೋವು ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗವಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಗೋವನ್ನು ಕದ್ದು, ಕೊಂದ ಆರೋಪದ ಮೇರೆಗೆ ಬಂಧಿತನಾಗಿದ್ದ ಸಾಂಬಲ್‌ ಜಿಲ್ಲೆಯ ಜಾವೇದ್‌ ಎಂಬಾತನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಹಾಗೂ ಗೋ ಹತ್ಯೆ ಮಾಡುವವರನ್ನು ಶಿಕ್ಷಿಸುವ ನಿಟ್ಟಿನಲ್ಲಿ ಸಂಸತ್ತು ಕಾನೂನು ರೂಪಿಸಬೇಕು ಎಂದು ಹೇಳಿದ್ದು ಮಾತ್ರವಲ್ಲದೆ ಆರೋಪಿಗೆ ಜಾಮೀನು ನಿರಾಕರಿಸಿದೆ.

ಗೋವು ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗವಾಗಿದೆ. ಮೂಲಭೂತ ಹಕ್ಕು ಗೋಮಾಂಸ ತಿನ್ನುವವರಿಗಷ್ಟೇ ಅಲ್ಲದೆ, ಗೋವುಗಳನ್ನು ಪೂಜಿಸುವ ಮತ್ತು ಅದರ ಮೇಲೆಯೇ ಆರ್ಥಿಕವಾಗಿ ಅವಲಂಬಿಸಿರುವವರಿಗೂ ಇದೆ. ಜೀವಿಸುವ ಹಕ್ಕು ಕೊಲ್ಲುವ ಹಕ್ಕನ್ನು ಮೀರಿದ್ದು ಮತ್ತು ಗೋಮಾಂಸ ತಿನ್ನುವ ಹಕ್ಕನ್ನು ಎಂದಿಗೂ ಮೂಲಭೂತ ಹಕ್ಕೆಂದು ಪರಿಗಣಿಸಲಾಗದು. ಇದು ಅರ್ಜಿದಾರರ ಮೊದಲ ಅಪರಾಧವಲ್ಲ. ಈ ಅಪರಾಧಕ್ಕೂ ಮುನ್ನ, ಅವರು ಹಲವು ಗೋ ಹತ್ಯೆಯನ್ನು ಮಾಡಿದ್ದಾರೆ. ಇದು ಸಮಾಜದಲ್ಲಿ ಸಾಮರಸ್ಯವನ್ನು ಕದಡಿದೆ. ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾದರೆ ಮತ್ತೆ ಅದೇ ಅಪರಾಧ ಎಸಗುತ್ತಾರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮುಸ್ಲಿಂ ಆಡಳಿತಗಾರರೇ ಗೋವನ್ನು ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗ ಎಂದು ಪರಿಗಣಿಸಿದ್ದರು.
ಗೋವನ್ನು ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗ ಎಂದು ಮುಸ್ಲೀಂ ಸಮುದಾಯದವರು ಪರಿಗಣಿಸಿದ್ದರು. ಬಾಬರ್, ಹುಮಾಯೂನ್ ಮತ್ತು ಅಕ್ಬರ್ ತಮ್ಮ ಧಾರ್ಮಿಕ ಹಬ್ಬಗಳಲ್ಲಿ ಗೋವುಗಳ ಬಲಿ ನಿಷೇಧಿಸಿದ್ದರು ಎಂದು ನ್ಯಾಯಾಲಯ ಉಲ್ಲೇಖಿಸಿದೆ. ಇದ್ದಲ್ಲದೆ ಮೈಸೂರಿನ ಆಡಳಿತಗಾರ ಹೈದರ್ ಅಲಿ ಆಡಳಿತಾವಧಿಯಲ್ಲಿ ಕೂಡ ಗೋಹತ್ಯೆ ಶಿಕ್ಷಾರ್ಹ ಅಪರಾಧವಾಗಿತ್ತು ಎಂದು ಉದಾಹರಣೆ ನೀಡಿದೆ.

ಒಂದು ದೇಶದ ಸಂಸ್ಕೃತಿ ಮತ್ತು ನಂಬಿಕೆಗೆ ಧಕ್ಕೆಯುಂಟಾದರೆ ದೇಶವು ದುರ್ಬಲವಾಗುತ್ತದೆ. ಆದ್ದರಿಂದ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು. ಗೋ ರಕ್ಷಣೆಯ ಹೆಸರಿನಲ್ಲಿ ಗೋವುಗಳಿಗೆ ಆಶ್ರಯ ಕಲ್ಪಿಸಿ ಹಣಗಳಿಕೆಯಲ್ಲಿ ತೊಡಗಿರುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಸರ್ಕಾರ ಕಾನೂನುಗಳನ್ನು ತರಬೇಕು ಎಂದು ನ್ಯಾಯಾಲಯ ಸೂಚಿಸಿದೆ.

Comments are closed.