ಕುಂದಾಪುರ : ಜ.21ರಂದು ಗಂಗೊಳ್ಳಿಯ ದಿನಸಿ ಅಂಗಡಿ, ಗೋದಾಮು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಪ್ರಮುಖ ಆರೋಪಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.
ಗಂಗೊಳ್ಳಿ ಸಮೀಪದ ತ್ರಾಸಿ ಬಳಿ ಭಾನುವಾರ ಬೆಳಿಗ್ಗೆ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಯನ್ನು ಗಂಗೊಳ್ಳಿಯ ಬಾಬಾಷಾ ಮೊಹಲ್ಲಾ ನಿವಾಸಿ ಜುನೈದ್ (23) ಎಂದು ಗುರುತಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಫೆ.13ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ. ಅಂಗಡಿಗೆ ಬೆಂಕಿ ಹಚ್ಚಿದ ದಿನದಿಂದ ಆರೋಪಿಯು ತಲೆ ಮರೆಸಿಕೊಂಡಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯ ನಡೆಸಿದ್ದರು. ಡಿವೈಎಸ್‌ಪಿ ಮಂಜುನಾಥ ಶೆಟ್ಟಿ ಆದೇಶದಂತೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುದರ್ಶನ ಮಾರ್ಗದರ್ಶದಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕರ ಸುಬ್ಬಣ್ಣ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಆರೋಪಿಯು ಕೃತ್ಯಕ್ಕೆ ಬಳಸಿಕೊಂಡಿದ್ದ ಮಾರುತಿ ಓಮ್ನಿ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.