ಕರಾವಳಿ

ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯ: ಕರ್ನಾಟಕ ಬಂದ್ ಯಶಸ್ವಿ; ಜನ ಜೀವನ ಸಂಪೂರ್ಣ ಅಸ್ತವ್ಯಸ್ತ

Pinterest LinkedIn Tumblr

kar bandh

ಬೆಂಗಳೂರು, ಸೆ.26: ನೆಲ, ಜಲ, ಭಾಷೆ ವಿಚಾರ ಬಂದಾಗ ಕನ್ನಡಿಗರೆಲ್ಲಾ ಒಂದೇ ಎಂಬುದು ಇಂದು ಮತ್ತೊಮ್ಮೆ ಸಾಬೀತಾಗಿದೆ. ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂಬ ಭೇದ- ಭಾವ ಇದೆ ಎಂಬ ಅಪವಾದದಲ್ಲಿ ಹುರುಳಿಲ್ಲ ಎಂಬುದನ್ನು ಸಮಸ್ತ ಕನ್ನಡಿಗರು ಒಕ್ಕೊರಲಿನಿಂದ ಕೂಗಿ ಹೇಳಿದ್ದಾರೆ.

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಮಹದಾಯಿ ಹಾಗೂ ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಳೆದ 2 ತಿಂಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿದ್ದ ಕರ್ನಾಟಕ ಬಂದ್ “ಅಪೂರ್ವ ಯಶಸ್ಸು” ಕಂಡಿದೆ.

kar bandh1

kar bandh2

kar bandh3

kar bandh4

kar bandh5

kar bandh6

kar bandh7

ಇಂದಿನ ಕರ್ನಾಟಕ ಬಂದ್ ಯಶಸ್ಸಿನಿಂದಾಗಿ ಗಂಡು ಮೆಟ್ಟಿದ ನಾಡು ಉತ್ತರ ಕರ್ನಾಟಕದ ಜನರ ನಾಲ್ಕು ದಶಕಗಳ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಬೃಹತ್ ಆಂದೋಲನ ರೂಪ ತಾಳಿದೆ ಎಂದರೆ ಅತಿಶಯೋಕ್ತಿ ಆಗಲಾರದು.

ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟ, ವಿವಿಧ ಕನ್ನಡ ಪರ ಸಂಘಟನೆಗಳ ಜತೆಗೂಡಿ ಕರೆ ನೀಡಿದ್ದ ಬಂದ್‌ಗೆ ಸಾರ್ವಜನಿಕರು, ವ್ಯಾಪಾರಿಗಳು, ಉದ್ದಿಮೆದಾರರು, ವಿವಿಧ ಕಾರ್ಮಿಕ ಹಾಗೂ ರೈತಪರ ಸಂಘಟನೆಗಳು, ಕೆಎಸ್ಸಾರ್ಟಿಸಿ ಸೇರಿದಂತೆ ವಿವಿಧ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳು, ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಗಳು ಬೆಂಬಲ ವ್ಯಕ್ತಪಡಿಸಿದ್ದರಿಂದ ಬಂದ್ ಬಹುತೇಕ ಶಾಂತಿಯುತವಾಗಿ ನಡೆದಿದೆ.

ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು ಸೇರಿದಂತೆ ಕೆಲವೆಡೆ ಬಸ್‌ಗಳ ಮೇಲೆ ಕಲ್ಲು ತೂರಾಟ, ಟೈರ್‌ಗಳಿಗೆ ಬೆಂಕಿ, ರಸ್ತೆ ಹಾಗೂ ರೈಲು ತಡೆಗಳಂತಹ ಘಟನೆಗಳನ್ನು ಹೊರತುಪಡಿಸಿದರೆ ಗುರುತಿಸಬಹುದಾದಂತಹ ಅಹಿತಕರ ಘಟನೆಗಳು ನಡೆದಿಲ್ಲ.

ಉತ್ತರ ಕರ್ನಾಟಕದ ಜನರ ಹೋರಾಟಕ್ಕೆ ಬೆಂಬಲವಾಗಿ ಇಡೀ ಕನ್ನಡ ಚಿತ್ರರಂಗ ಇತ್ತೀಚೆಗೆ ಹುಬ್ಬಳ್ಳಿಗೆ ತೆರಳಿ ಸಮಾವೇಶ ನಡೆಸಿದ್ದು, ಗೋಕಾಕ್ ಚಳವಳಿಯನ್ನು ನೆನಪಿಗೆ ತಂದಿತ್ತು.

ಚಲನಚಿತ್ರ ರಂಗದ ದಿಗ್ಗಜ ಕಲಾವಿದರು, ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು ಸೇರಿದಂತೆ ಇಡೀ ಚಿತ್ರರಂಗ ಅಲ್ಲಿ ಜಮಾಯಿಸಿತ್ತು. ನಿಮ್ಮೊಂದಿಗೆ ನಾವಿದ್ದೇವೆ ಎಂದು ಒಕ್ಕೊರಲಿನಿಂದ ತಂಡ ಘೋಷಣೆ ಮಾ‌ಡಿತ್ತು.

ಪರೋಕ್ಷ ಬೆಂಬಲ

ಕುಡಿಯುವ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮಾನವೀಯ ನೆಲಗಟ್ಟಿನ ಮೇಲೆ ರಾಜ್ಯ ಸರ್ಕಾರವೂ ಪರೋಕ್ಷವಾಗಿ ಬೆಂಬಲ ಸೂಚಿಸಿದೆ.

ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಶಾಲಾ-ಕಾಲೇಜುಗಳು ಮುಚ್ಚಿವೆ. ಸುಮಾರು 6 ಲಕ್ಷ ಸರ್ಕಾರಿ ನೌಕರರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿರುವುದರಿಂದ ಬಂದ್ ಯಶಸ್ಸಿಗೆ ಪೂರಕ ವಾತಾವರಣ ನಿರ್ಮಾಣವಾಗಿದೆ.

ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಹಾವೇರಿ, ಬಾಗಲಕೋಟೆ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ, ರಾಮನಗರ ಮುಂತಾದ ಜಿಲ್ಲೆಗಳಲ್ಲಿ ಬಂದ್ ಸಂಪೂರ್ಣ ಯಶಸ್ವಿಯಾಗಿದ್ದರೆ, ಹೈದರಾಬಾದ್ ಕರ್ನಾಟಕ ಭಾಗದ ಗುಲ್ಬರ್ಗಾ, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಎಲ್ಲೆಡೆ ಅಂಗಡಿ-ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿತ್ತು. ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್‌ಗಳು, ಆಟೋ, ಟ್ಯಾಕ್ಸಿ, ಸರಕು ಸಾಗಣೆ ವಾಹನಗಳು, ಟ್ರಕ್‌ಗಳು ಬೀದಿಗಿಳಿಯದ ಕಾರಣ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಸರ್ಕಾರಿ ಕಚೇರಿಗಳಿಗೆ ಅಘೋಷಿತ ರಜೆ ಘೋಷಣೆಯಾದಂತಿತ್ತು. ಬೆರಳೆಣಿಕೆಯಷ್ಟು ನೌಕರರು ಮಾತ್ರ ಕಚೇರಿಗಳಿಗೆ ಆಗಮಿಸಿದ್ದರು.

ಅಗತ್ಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ಔಷಧಿ ಮುಂತಾದವುಗಳ ಪೂರೈಕೆಗೆ ಯಾವುದೇ ವಿಧದಲ್ಲೂ ತೊಂದರೆಯಾಗಿಲ್ಲ.

ಬಂದೋ ಬಸ್ತ್

ಬಂದ್ ಕರೆ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿತ್ತು. ಸೂಕ್ಷ್ಮ ಪ್ರದೇಶಗಳಿಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಬೆಂಗಳೂರಿನ ಪ್ರಮುಖ ಬೀದಿಗಳಲ್ಲಿ ಪೊಲೀಸರ ಸರ್ಪಗಾವಲು ಹಾಕಲಾಗಿತ್ತು.

Write A Comment