ಉಡುಪಿ: ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿರುವ ಸಚಿವ ಕೆ.ಜೆ ಜಾರ್ಜ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಹಾಗೂ ಕಿರುಕುಳ ನೀಡಿದ್ದಾರೆ ಎನ್ನಲಾದ ಹಿರಿಯ ಪೊಲೀಸ್ ಅಧಿಕಾರಿಗಳ ಮೇಲೆ ಎಫ್.ಐ.ಆರ್ ದಾಖಲಿಸಬೇಕು ಎಂದು ಆಗ್ರಹಿಸಿ ಉಡುಪಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಾಗೂ ಧರಣಿ ನಡೆಯಿತು.

ಡಿವೈಎಸ್ಪಿ ಗಣಪತಿ ಆವರ ಆತ್ಮಹತ್ಯೆಯ ಹಿನ್ನಲೆಯಲ್ಲಿ ಬಿಜೆಪಿ ತನ್ನ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು ಇಂದು ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟನಡೆಸಿ ಸಚಿವ ಜಾರ್ಜ್ ತಲೆದಂಡಕ್ಕೆ ಒತ್ತಾಯಿಸಿತು. ಉಡುಪಿಯ ಕ್ಲಾಕ್ ಟವರ್ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸಿದ್ದು ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದರು. ಗಣಪತಿ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಜಾರ್ಜ್ ಅವರ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಅವರು ರಾಜೀನಾಮೆ ನೀಡಬೇಕು ಹಾಗೂ ಅಲ್ಲದೇ ಕಿರುಕುಳ ನೀಡಿದ್ದಾರೆ ಎನ್ನಲಾದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ದ ದೂರು ದಾಖಲಿಸಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನಾಕಾರರು ಬಳಿಕ ಜಿಲ್ಲಾಧಿಕಾರಿ ಕಚೇರಿ ತೆರಳಿ ಧರಣಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
Comments are closed.