ಮಂಗಳೂರು, ಡಿಸೆಂಬರ್.30 : ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಇಂದು ನಡೆಸಿದ ಕಾರ್ಯಾಚರಣೆಯಲ್ಲಿ ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಪರಿಸರದಲ್ಲಿ ರಸ್ತೆ ಬದಿಯಲ್ಲಿ ವ್ಯಾಪಾರದಲ್ಲಿ ತೊಡಗಿದ್ದ ವ್ಯಾಪರಿಗಳನ್ನು ತೆರವುಗೊಳಿಸಿದರು.
ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಪರಿಸರದಲ್ಲಿ ಹಲವಾರು ಮಂದಿ ಮತ್ತೆ ರಸ್ತೆ ಬದಿಯಲ್ಲಿ ವ್ಯಾಪಾರದಲ್ಲಿ ನಿರತರಾದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿ ಪ್ರವೀಣ್ಚಂದ್ರ ಕರ್ಕೇರ ಹಾಗೂ ಮತ್ತೋರ್ವ ಮನಪಾ ಅಧಿಕಾರಿ ಮಧುಕರ್ ನೇತ್ರತ್ವದಲ್ಲಿ ದಾಳಿ ನಡೆಸಿ ಸ್ಥಳದಲ್ಲಿದ್ದ ವ್ಯಾಪಾರಿಗಳನ್ನು ತೆರವುಗೊಳಿಸಲಾಯಿತು. ಈ ಸಂದರ್ಭದಲ್ಲಿ ಯಾವೂದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತ ಕ್ರಮವಾಗಿ ದಕ್ಷಿಣ ಠಾಣಾ ಪೊಲೀಸರು ರಕ್ಷಣೆಯ ಹೊಣೆ ವಹಿಸಿದ್ದರು.
ಬೀದಿ ಬದಿ ವ್ಯಾಪಾರಿಗಳಿಗಾಗಿ ಈಗಾಗಲೇ ನಗರದ ಪುರಭವನದ ಸಮೀಪ ಸ್ಥಳ ನಿಗದಿಪಡಿಸಲಾಗಿದ್ದು, ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಿಗಳು ನಿಗದಿ ಪಡಿಸಿದ ಸ್ಥಳದಲ್ಲೇ ವ್ಯಾಪಾರ ಮಾಡಬೇಕೆಂದು ತಿಳಿಸಿದ್ದರು ಕೆಲವರು ಅಲ್ಲಲ್ಲಿ ರಸ್ತೆ ಬದಿಯಲ್ಲಿ ಕುಳಿತು ವ್ಯಾಪಾರ ಮಾಡುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ಮನಪಾ ದಾಳಿ ಕಾರ್ಯಾಚರಣೆ ನಡೆಸಿ ಎಚ್ಚರಿಕೆ ನೀಡಿರುವುದಾಗಿ ಮನಪಾ ಅಧಿಕಾರಿಗಳು ತಿಳಿಸಿದ್ದಾರೆ.
Comments are closed.