ಮಂಗಳೂರು,ಜನವರಿ,6: ರಾಜ್ಯದ ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ಘೋಷಿಸಿರುವ ಅನುದಾನ ಕಡಿಮೆಯಾಗಿದೆ. ಇನ್ನಷ್ಟು ಅನುದಾನ ನೀಡುವಂತೆ ಮತ್ತೆ ಪ್ರಧಾನಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಗುರುವಾರ ನಗರಕ್ಕೆ ಆಗಮಿಸಿದ್ದ ಸಂದರ್ಭ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜತೆ ಮಾತನಾಡಿದ ಅವರು, ರಾಜ್ಯದ 139 ತಾಲೂಕುಗಳಲ್ಲಿ ತೀವ್ರ ಬರವಿದ್ದು 35 ಲಕ್ಷ ರೈತರು ಬಾಧಿತರಾಗಿದ್ದಾರೆ. 17,000 ಕೊ.ರೂ. ಮೌಲ್ಯದ ಬೆಳೆ ನಾಶವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರಕ್ಕೆ ಸರ್ವಪಕ್ಷಗಳನ್ನು ಒಳಗೊಂಡ ನಿಯೋಗ ತೆರಳಿ ಪ್ರಧಾನಿಯವರನ್ನು ಭೇಟಿಯಾಗಿ 4,702 ಕೋ.ರೂ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಮಾನದಂಡದ ಪ್ರಕಾರ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದ್ದೆವು. ಆದರೆ ಕೇಂದ್ರ ಸರಕಾರ ಕೇವಲ 1,782 ಕೋ.ರೂ. ಬಿಡುಗಡೆ ಮಾಡಿದೆ. ಇದು ನಾವು ಕೇಳಿದ ಮೊತ್ತದ ಶೇ. 50ರಷ್ಟು ಕೂಡ ಇಲ್ಲ. ರಾಜ್ಯಕ್ಕೆ ಹೆಚ್ಚು ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರವನ್ನು ಮತ್ತೆ ಕೋರುತ್ತೇವೆ ಎಂದರು.
ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಗಣಪತಿ ಅವರ ತಂದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ಪ್ರಕರಣದಲ್ಲಿ ಈಗಾಗಲೇ ಸಿಐಡಿ ತನಿಖೆಯಾಗಿದ್ದು ಕೆ.ಜೆ. ಜಾರ್ಜ್ ಅವರ ಮೇಲೆ ಮಾಡಿರುವ ಆರೋಪದಲ್ಲಿ ಸತ್ಯಾಂಶ ಇಲ್ಲ ಎಂದು ವರದಿ ನೀಡಿದೆ. ಇದೊಂದು ಮುಗಿದ ಆಧ್ಯಾಯ ಎಂದರು.
ಕೊಕ್ಕಡ ಬಳಿ ಎಂಡೋಸಲ್ಫಾನ್ ಪೀಡಿತ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೊಕ್ಕಡದಲ್ಲಿ ಎಂಡೋಸಲ್ಫಾನ್ ಪೀಡಿತ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವುದು ದುರದೃಷ್ಟಕರ. ಎಂಡೋಸಲ್ಫಾನ್ ಸಂತ್ರಸ್ತರಿಗೆ ಮಾಸಾಶನ ನೀಡಲಾಗುತ್ತಿದೆ. ಅವರು ಆತ್ಮಹತ್ಯೆ ಮಾಡಿಕೊಳ್ಳಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.
Comments are closed.