ಮಂಗಳೂರು, ಅಕ್ಟೋಬರ್ 23: ಮಂಗಳೂರಿನ ಹೊರವಲಯದ ಕಾಲೇಜೊಂದರ ಸುತ್ತಮುತ್ತ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ರಿಯಾಸ್ (25)ಎಂದು ಗುರುತಿಸಲಾಗಿದೆ. ಆರೋಪಿಯಿಂದ 250 ಗ್ರಾಂ ಗಾಂಜಾ ಹಾಗು ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ಎಂಬಲ್ಲಿ ಒಳಬೈಲು ಬಳಿಯ ಕರಾವಳಿ ಇನ್ಸಿಟ್ಯೂಟ್ ಆಫ್ ಟೆಕ್ನೋಲಾಜಿ ಕಾಲೇಜು ಎದುರುಗಡೆ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಮೊಹಮ್ಮದ್ ರಿಯಾಸ್ ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕೇಟ್ ಗಳನ್ನಾಗಿ ಮಾಡಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆಗೆ ಹಸ್ತಾಂತರಿಸಲಾಗಿದ್ದು, ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Comments are closed.