ಕರಾವಳಿ

ಅಕ್ಟೋಬರ್ 29 : ಪ್ರಧಾನಿ ಮೋದಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ – ವ್ಯಾಪಕ ಬಂದೋಬಸ್ತ್

Pinterest LinkedIn Tumblr

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 29ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಪ್ರಧಾನಿ ಅವರ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. ಉಜಿರೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಸಭೆ ನಡೆಸಿ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ನಡೆಯುವ ಸ್ಥಳಗಳಿಗೆ ಭೇಟಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು.

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿರುವರು. ಬಳಿಕ ಅವರು ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ..

ಇನ್ನೊಂದು ಮೂಲದ ಪ್ರಕಾರ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅ.29ರಂದು ಬೆಳಗ್ಗೆ 10.30ಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಧರ್ಮಸ್ಥಳಕ್ಕೆ ತೆರಳಲಿದ್ದಾರೆ. ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಹೆಲಿಕಾಪ್ಟರ್‌ ಮೂಲಕವೇ ಉಜಿರೆಗೆ 11.40ಕ್ಕೆ ತಲುಪಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನ 12.50ಕ್ಕೆ ನಿರ್ಗಮಿಸಿ ಹೆಲಿಕಾಪ್ಟರ್‌ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಿ ಅಲ್ಲಿಂದ 1.10ಕ್ಕೆ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಅನಂತರ ಬೆಂಗಳೂರು, ಬೀದರ್‌ನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿದ್ದು, ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ವರ್ಧಂತ್ಯುತ್ಸವ ಸಂದರ್ಭ ಕೂಡ ಇದೇ ಆಗಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಧರ್ಮಸ್ಥಳ ಭೇಟಿ ಮಹತ್ವ ಪಡೆದಿದೆ.

Comments are closed.