ಕರಾವಳಿ

ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಸಭೆಗೆ ಗೈರಾದರೆ ಕ್ರಿಮಿನಲ್ ಕೇಸು: ಅಧಿಕಾರಿಗಳಿಗೆ ಜಿ.ಪಂ.ಸಿಇಓ ಎಚ್ಚರಿಕೆ

Pinterest LinkedIn Tumblr

ಮಂಗಳೂರು ನವೆಂಬರ್ 22: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ ಎಚ್ಚರಿಸಿದ್ದಾರೆ.

ಅವರು ಬುಧವಾರ ಜಿ.ಪಂ. ನೇತ್ರಾವತಿ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖೆಗಳ ವಿಶೇಷ ಘಟಕ ಯೋಜನೆ(ಎಸ್‍ಸಿಪಿ) ಹಾಗೂ ಗಿರಿಜನ ಉಪಯೋಜನೆ(ಟಿಎಸ್‍ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯ ಸರಕಾರದ ನಿಯಮಾವಳಿಯಂತೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ನಿರ್ಲಕ್ಷ್ಯ ವಹಿಸುವ ಹಾಗೂ ಸಭೆಗಳಿಗೆ ಅನಾಧಾರ ತೋರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ಅವಕಾಶವಿದೆ. ಇದನ್ನೇ ಬಳಸಿಕೊಂಡು ಸೂಕ್ತ ಕ್ರಮ ಜರುಗಿಸಲಾಗುವುದು. ಮುಂದಿನ ದಿನಗಳಲ್ಲಿ ಸಭಾ ನೋಟೀಸ್‍ನಲ್ಲಿಯೇ ಈ ನಿಯಮವನ್ನು ಉಲ್ಲೇಖಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಜಿ.ಪಂ. ಸಿಇಓ ನಿರ್ದೇಶಿಸಿದರು.

ವಿವಿಧ ಇಲಾಖೆಗಳ ಎಸ್‍ಸಿಪಿ/ಟಿಎಸ್‍ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿದ ಅವರು ತಾಲೂಕು ಪಂಚಾಯತ್‍ಗಳಲ್ಲಿ ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಗಳ ಅನುದಾನವನ್ನೂ ಇನ್ನೂ ಬಳಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕೂಡಲೇ ಈ ವಾರದೊಳಗೆ ಅನುದಾನಕ್ಕೆ ತಕ್ಕಂತೆ ಕಾಮಗಾರಿಗಳ ಅಂದಾಜುಪಟ್ಟಿ ತಯಾರಿಸಿ, ಕೆಲಸ ಆರಂಭಿಸಬೇಕು ಎಂದು ತಾ.ಪಂ. ಕಾರ್ಯನಿರ್ವಹಣಾ ಧಿಕಾರಿಗಳಿಗೆ ತಾಕೀತು ಮಾಡಿದರು.

ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಇಲಾಖೆಗಳು ಎಸ್‍ಸಿಪಿ/ಟಿಎಸ್‍ಪಿ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಉತ್ತಮ ಪ್ರಗತಿ ಸಾಧಿಸಲು ಡಾ.ಎಂ.ಆರ್. ರವಿ ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆಯಲ್ಲಿಯೇ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಪ್ರಗತಿಯಾಗದಿರುವುದಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅತೃಪ್ತಿ ವ್ಯಕ್ತಪಡಿಸಿದರು.

ಸರ್ಕಾರವು ಜಾರಿಗೆ ತಂದಿರುವ ಯೋಜನೆಗಳನ್ನು ಸೂಕ್ತ ಸಮಯದಲ್ಲಿ ಜನರಿಗೆ ತಲುಪುವಂತೆ ಮಾಡಬೇಕಾಗಿದ್ದು ಇದಕ್ಕಾಗಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡಬೇಕೆಂದು ತಿಳಿಸಿದರು. ಇಂದಿನ ಎಸ್‍ಸಿಪಿ/ಟಿಎಸ್‍ಪಿ ಸಭೆಗೆ ವಿವಿಧ ಇಲಾಖೆಗಳ ಮಾಹಿತಿಯನ್ನು ಸಮರ್ಪಕವಾಗಿ ಕ್ರೋಢೀಕರಿಸದೆ ಇರುವುದಕ್ಕೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಬಗ್ಗೆ ಇಲಾಖೆಯ ಕಚೇರಿ ಸಿಬ್ಬಂದಿಗಳಿಗೆ ನೋಟೀಸ್ ಜಾರಿ ಮಾಡಲು ಆದೇಶಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ(ಪ್ರಭಾರ) ಎಂ.ವಿ.ನಾಯಕ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು ಉಪಸ್ಥಿತರಿದ್ದರು.

Comments are closed.