ಕರಾವಳಿ

ಕೊಲೆ ಆರೋಪ ಎದುರಿಸುತ್ತಿರುವ ಇಬ್ಬರು ಸಚಿವರ ರಾಜಿನಾಮೆಗೆ ಬಿಜೆಪಿ ಅಗ್ರಹ : ಪ್ರತಿಭಟನೆ

Pinterest LinkedIn Tumblr

ಮಂಗಳೂರು, ನವೆಂಬರ್. 28: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಹಾಗೂ ಕೊಲೆ ಪ್ರಕರಣದ ಆರೋಪವನ್ನು ಎದುರಿಸುತ್ತಿರುವ ರಾಜ್ಯ ಸಚಿವ ಸಂಪುಟದಲ್ಲಿ ಇರುವ ಇಬ್ಬರು ಸಚಿವರು ಕೂಡಲೇ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ಮಂಗಳೂರಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ದ.ಕ,.ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಟಂದೂರು ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರಕಾರದ ಧೋರಣೆಯ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ. ಸಚಿವರಾದ ಕೆ.ಜೆ. ಜಾರ್ಜ್ ಮತ್ತು ವಿನಯ ಕುಲಕರ್ಣಿ ಇಬ್ಬರು ಕೊಲೆ ಪ್ರಕರಣದ ಆರೋಪವನ್ನು ಎದುರಿಸುತ್ತಿರುವ ಹಿನ್ನೆಲೆ ಯಲ್ಲಿ ಅವರು ತಕ್ಷಣ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು.

ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಡಿವೈಎಸ್ಪಿ ಸಾವಿನ ಪ್ರಕರಣದಲ್ಲಿ ಆರೋಪವನ್ನು ಎದುರಿಸುತ್ತಿದ್ದಾರೆ. ಅದೇ ರೀತಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪವನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಸಮರ್ಪಕ ತನಿಖೆ ನಡಯಬೇಕಾದರೆ ಸಚಿವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಈ ಬಗ್ಗೆ ಸರಕಾರದ ಮೂಲಕ ಇಬ್ಬರು ಸಚಿವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಆಗ್ರಹಿಸಿದರು.

ಪ್ರತಿಭಟನಾ ಸಭೆಯ ಬಳಿಕ ಬಿಜೆಪಿ ನಿಯೋಗದಿಂದ ಈ ಬಗ್ಗೆ ಜಿಲ್ಲಾಧಿಕಾರಿಯ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನಾ ಸಭೆಯಲ್ಲಿ ಮಾಜಿ ಶಾಸಕರಾದ ಯೋಗೀಶ್ ಭಟ್, ಜಯರಾಮ ಶೆಟ್ಟಿ, ಬಿಜೆಪಿ ಮುಖಂಡರಾದ ಉಮಾನಾಥ ಕೊಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

Comments are closed.