
ಮಂಗಳೂರು ಡಿಸೆಂಬರ್ 29 : ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾ ಸಮಿತಿ ಸಭೆ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಅಧ್ಯಕ್ಷತೆಯಲ್ಲಿ ಗುರುವಾರ ಜರಗಿತು.ಬಾಲನ್ಯಾಯ ಕಾಯ್ದೆಯಲ್ಲಿ ನೋಂದಾವಣೆಗೊಳ್ಳದ ಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ನೋಂದಾವಣೆಯಾಗುವಂತೆ ಇಲ್ಲವಾದಲ್ಲಿ ಸಂಸ್ಥೆಯನ್ನು ಮುಚ್ಚುವಂತೆ ಹಾಗೂ ಕಾನೂನು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ 2016 ರನ್ನು ಎಲ್ಲಾ ಶೈಕ್ಷಣಿಕ ಶಿಕ್ಷಣ ಸಂಸ್ಥೆಗಳಲ್ಲಿ ಸಮರ್ಪಕವಾಗಿ ರೂಪಿಸುವಂತೆ ಸಿಆರ್ಪಿಗಳಿಗೆ ಸೂಕ್ತ ನಿರ್ದೇಶನವನ್ನು ನೀಡುವಂತೆ ಡಿಡಿಪಿಐಗೆ ಜಿಲ್ಲಾಧಿಕಾರಿ ಸೂಚಿಸಿದರು.
ಮಕ್ಕಳ ಹಕ್ಕುಗಳ ಕುರಿತು ಮಾಸಿಕ ವರದಿಯನ್ನು ಗ್ರಾಮ ಪಂಚಾಯತ್ಗಳು ಕಡ್ಡಾಯವಾಗಿ ನೀಡುವಂತೆ ನಿಯಮಗಳನ್ನು ರೂಪಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳ ಸಮಿತಿಯನ್ನು ಈಗಾಗಲೇ ರಚಿಸಿದ್ದು ಮಕ್ಕಳ ಗ್ರಾಮಸಭೆಯನ್ನು ಯೋಜಿತ ರೀತಿಯಲ್ಲಿ ನಡೆಸಬೇಕೆಂದು ಅವರು ಸೂಚಿಸಿದರು.
ಬಾಲನ್ಯಾಯ ಕಾಯ್ದೆಯಡಿ ನೋಂದಾಯಿಸಲು ಬಾಕಿ ಇರುವ ಸಂಸ್ಥೆಗಳಿಗೆ 3 ತಿಂಗಳ ಗಡುವನ್ನು ನೀಡಲಾಗಿದ್ದು ಅಗತ್ಯವಿದ್ದಲ್ಲಿ ಕಾನೂನು ಕ್ರಮ ಜರಗಿಸುವುದಾಗಿ ಅವರು ಎಚ್ಚರಿಸಿದರು.
ಜಿಲ್ಲೆಯಲ್ಲಿ 2012 ರಿಂದ 2017ರ ನವೆಂಬರ್ವರೆಗೆ ಒಟ್ಟು 421 ಪೋಕ್ಸೊ ಪ್ರಕರಣಗಳು ದಾಖಲಾಗಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು ಇನ್ನು ಕೂಡ ಇತ್ಯಾರ್ಥವಾಗದೇ ಉಳಿದಿರುವ ಪ್ರಕರಣಗಳನ್ನು ಶೀಘ್ರವಾಗಿ ಪರಿಶೀಲಿಸಲು ಸಾರ್ವಜನಿಕ ಕಾನೂನನ್ನು ಬಳಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯ ಮುಖಾಂತರ ಶಾಲಾ ಮಕ್ಕಳಿಗೆ ಪೋಕ್ಸೊ ಕಾಯ್ದೆಯ ಕುರಿತು ಜಾಗೃತಿಯನ್ನು ಮೂಡಿಸುವ ಕೆಲಸವನ್ನು ಮಾಡಿಸುವುದಾಗಿ ತಿಳಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ 2016 ರನ್ನು ಎಲ್ಲಾ ಶೈಕ್ಷಣಿಕ ಶಿಕ್ಷಣ ಸಂಸ್ಥೆಗಳಲ್ಲಿ ಸಮರ್ಪಕವಾಗಿ ರೂಪಿಸಿ ಸಿಆರ್ಪಿಗಳಿಗೆ ಅದರ ಜವಾಬ್ದಾರಿಯನ್ನು ವಹಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ದಕ ಜಿಲ್ಲಾ ಪಂಚಾಯತ್ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವೈ ಶಿವರಾಮಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಉಸ್ಮಾನ್ ಎ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.