ಕರಾವಳಿ

ಫರಂಗಿಪೇಟೆ : ಚಲಿಸುತ್ತಿದ್ದ ಬಸ್ ಕಾರಿನ ಮೇಲೆ ಉರುಳಿ ಬಿದ್ದು ಹಲವರಿಗೆ ಗಾಯ

Pinterest LinkedIn Tumblr

ಮಂಗಳೂರು, ಆಗಸ್ಟ್.01: ಫರಂಗಿಪೇಟೆ ಸಮೀಪದ ಅರ್ಕುಳ (ಮಂಗಳೂರು – ಬೆಂಗಳೂರು) ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಇತರ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಚಲಿಸುತ್ತಿದ್ದ ಬಸ್ಸಿನ ಟಯರ್ ಸಿಡಿದ ಪರಿಣಾಮ ಬಸ್ಸು ಕಾರಿಗೆ ಢಿಕ್ಕಿ ಹೊಡೆದು ಮಗುಚಿಬಿದಿದೆ. ಅಪಘಾತದಿಂದ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದ್ದು, ಬಸ್ ಕೂಡಾ ಜಖಂಗೊಂಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಹಾಗೂ ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಪುತ್ತೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ ಸಮೀಪದ ಅರ್ಕುಳ ಬಳಿ ತಲುಪಿದಾಗ ಅದರ ಟಯರ್ ಸಿಡಿದಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಾರೊಂದಕ್ಕೆ ಢಿಕ್ಕಿ ಹೊಡೆದು ಬಳಿಕ ಕಾರಿನ ಮೇಲೆಯೇ ಉರುಳಿಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿ ಭಾರೀ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Comments are closed.