
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಆದ್ಯತೆ ನೀಡಬೇಕು ಹಾಗೂ ಮಾದಕದ್ರವ್ಯ ಸಾಗಾಟ ಮತ್ತು ಮಾರಾಟ ಚಟುವಟಿಕೆಗಳ ಬಗ್ಗೆ ಕಠಿನ ಕ್ರಮ ಜರಗಿಸಬೇಕು. ಈ ವಿಷಯದಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳುವ ಕ್ರಮಗಳಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಅವರು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಕಮಿಷನರೆಟ್ ಮತ್ತು ದ.ಕ. ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳ ಜತೆ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು. ಮಾದಕದ್ರವ್ಯ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರ ಮೂಲ ಪತ್ತೆಯಾದರೆ ಮಾತ್ರ ಮೂಲೋತ್ಪಾಟನೆ ಸಾಧ್ಯ. ಗಾಂಜಾ ಹಾವಳಿ ಗ್ರಾಮೀಣ ಪ್ರದೇಶಕ್ಕೂ ವ್ಯಾಪಿಸಿದೆ. ಈ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದರು.
ಮಂಗಳೂರು ನಗರ ಸಹಿತ ದ.ಕ. ಜಿಲ್ಲೆಯಲ್ಲಿ ಯಾವುದೇ ಕೋಮು ಪ್ರಚೋದಿತ ಘಟನೆಗಳಿಗೆ ಅವಕಾಶ ನೀಡಬಾರದು. ಅಂತಹ ಘಟನೆಗಳು ನಡೆಯುವ ಲಕ್ಷಣಗಳು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಪ್ರವಾಸ, ಶಿಕ್ಷಣ ಹಾಗೂ ಬಂಡವಾಳ ಹೂಡಿಕೆಗೆ ಬರುವವರಿಗೆ ದಕ್ಷಿಣ ಕನ್ನಡ ಸುರಕ್ಷಿತ ಅಲ್ಲ ಎಂಬ ಭಾವನೆ ಬರಬಾರದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸದಾ ಜಾಗೃತ ಸ್ಥಿತಿಯಲ್ಲಿರಬೇಕು ಎಂದು ಸಚಿವರು ಸಲಹೆ ನೀಡಿದರು.
ಸಾಮಾಜಿಕ ಜಾಲ ತಾಣಗಳ ಮೂಲಕ ಸುಳ್ಳು ಸುದ್ದಿ ಹಬ್ಬಿಸುವ ಹಾಗೂ ಜನರ ತೇಜೋವಧೆ ಮಾಡುವ ಮೂಲಕ ಸಮಾಜದ ಶಾಂತಿ ಕೆಡಿಸುವಂತಹ ಘಟನೆಗಳು ಆಗಿಂದಾಗ್ಗೆ ನಡೆಯುತ್ತಿದ್ದು, ಈ ಬಗ್ಗೆ ಪೊಲೀಸರು ಕಣ್ಗಾವಲು ಇರಿಸಬೇಕು; ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಅಡಿಶನಲ್ ಎಸ್ಪಿ ವಿ.ಜೆ. ಸಜಿತ್, ಮಂಗಳೂರಿನ ಡಿಸಿಪಿ ಉಮಾ ಪ್ರಶಾಂತ್, ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.