ಕರಾವಳಿ

ಲೋಕಸಭಾ ಚುನಾವಣೆ: ಏ. 18 ಮತ್ತು 23 ರಂದು ಸಾರ್ವತ್ರಿಕ ರಜೆ

Pinterest LinkedIn Tumblr

ಉಡುಪಿ: ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆ 2019 ನ್ನು ಘೋಷಿಸಿದ್ದು, ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 18 ರಂದು ಮತ್ತು ಇನ್ನುಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಏಪ್ರಿಲ್ 23 ರಂದು ಚುನಾವಣೆ ನಡೆಯಲಿರುತ್ತದೆ.

ಸದರಿ ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಚುನಾವಣೆ ನಡೆಯುವ ದಿನಗಳಾದ ಏಪ್ರಿಲ್ 18 ಮತ್ತು 23 ರಂದು ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾ ಪ್ರತಿನಿಧಿ ಕಾಯ್ದೆಯನ್ವಯ ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವ ವ್ಯವಸ್ಥೆ ಮಾಡತಕ್ಕದ್ದು ಎಂದು ಪ್ರಕಟಣೆ ತಿಳಿಸಿದೆ.

Comments are closed.