ಕರಾವಳಿ

ಕಾಣೆಯಾದ ಮಕ್ಕಳು ಮತ್ತು ಮಹಿಳೆಯರ ಪಟ್ಟಿ ತಯಾರಿಸಿ- ಜಿಲ್ಲಾಧಿಕಾರಿ ಜಿ.ಜಗದೀಶ್

Pinterest LinkedIn Tumblr

ಉಡುಪಿ: ಮಹಿಳೆ ಮತ್ತು ಮಕ್ಕಳ ಪ್ರಕರಣವು ಗಂಭೀರವಾಗಿದ್ದು, ಇದುವರೆಗೂ ಎಷ್ಟು ಮಹಿಳೆಯರು ಮತ್ತು ಮಕ್ಕಳು ಕಾಣೆಯಾಗಿದ್ದಾರೆ ಎನ್ನುವ ಪಟ್ಟಿ ತಯಾರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಮಹಿಳೆಯರ ಮತ್ತು ಮಕ್ಕಳ ಸಾಗಾಣೆ ಮತ್ತು ಮಾರಾಟ ನಿಷೇಧ ಕಾಯಿದೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹಿಳೆಯರಿಗೆ ಉದ್ಯೋಗದ ಆಮಿಷ ಒಡ್ಡಿ ಮೋಸ ಮಾಡುವ, ಅನಧಿಕೃತವಾಗಿ ಕಾರ್ಯ ನಿರ್ವಹಿಸುವ ಏಜೆನ್ಸಿಗಳಿದ್ದರೆ ಅವುಗಳನ್ನು ಪತ್ತೆ ಹಚ್ಚುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು, ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ತಂದು ಅವರಿಗೆ ಪುನರ್ವಸತಿ ಕಲ್ಪಿಸಿ, ಶಾಲೆಗೆ ಸೇರಿಸಬೇಕು, ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸುವ ಹೆತ್ತವರ ಜೊತೆ ಸಮಾಲೋಚನೆ ನಡೆಸಿ, ಮಕ್ಕಳು ಮತ್ತೆ ಭಿಕ್ಷಾಟನೆಯಲ್ಲಿ ತೊಡಗದಂತೆ ನೋಡಿಕೊಳ್ಳಬೇಕು. ಶಾಲೆಗೆ ಸೇರಿಸಿದ ಮಕ್ಕಳು ನಿಯಮಿತವಾಗಿ ಶಾಲೆಗೆ ಹೋಗುತ್ತಿದ್ದಾರೆಯೇ ಇಲ್ಲವೇ ಎನ್ನುವುದನ್ನು ಸಂಬಂದಪಟ್ಟ ಶಾಲಾ ಮುಖ್ಯೋಪಧ್ಯಾಯರ ಮೂಲಕ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ.ಜಿ.ಪುತ್ರನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕಿ ವೀಣಾ ವಿವೇಕಾನಂದ, ಡಿ.ವೈ.ಎಸ್.ಪಿ ಜೈ ಶಂಕರ್, ಡಿ.ಡಿ.ಪಿ.ಐ ಶೇಷಶಯನ ಕಾರಿಂಜ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.