ಕರಾವಳಿ

ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹರಡದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

Pinterest LinkedIn Tumblr

ಉಡುಪಿ: ಪಕ್ಕದ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಈ ರೋಗ ಹರಡದಂತೆ ಆರೋಗ್ಯ ಇಲಾಖೆಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ, ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳ ಜನತೆಗೆ ಮಂಗನ ಕಾಯಿಲೆ ಬಗ್ಗೆ ಸೂಕ್ತ ಅರಿವು ಮೂಡಿಸುವಂತೆ ಹಾಗೂ ಅಗತ್ಯವಾಗಿ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಸತ್ತ ಮಂಗಗಳನ್ನು ಗುರುತಿಸಿ, ಸೂಕ್ತ ರೀತಿಯಲ್ಲಿ ಪರೀಕ್ಷಿಸುವಂತೆ ಸೂಚಿಸಿದರು. ರೋಗ ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲೆಯಾದ್ಯಂತ ಅರಣ್ಯದಂಚಿನ ಗ್ರಾಮಸ್ಥರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಪೋಸ್ಟರ್‍ಗಳನ್ನು ಮುದ್ರಿಸಿ ವಿತರಿಸುವಂತೆ ಹಾಗೂ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ, ಜಿಲ್ಲಾ ರೋಗವಾಹಕ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಆರ್.ಸಿ.ಹೆಚ್. ಅಧಿಕಾರಿ ಡಾ. ಎಂ.ಜಿ ರಾಮ, ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.