ಕರಾವಳಿ

ಪರಿಸರ ಮಾಲಿನ್ಯ ಉಂಟು ಮಾಡುವ ಕೈಗಾರಿಕೆಗಳಿಗೆ ಅನುಮತಿಯಿಲ್ಲ: ಡಿಸಿ ಜಿ. ಜಗದೀಶ್

Pinterest LinkedIn Tumblr

ಉಡುಪಿ: ಜಿಲ್ಲೆಯ ವಿವಿಧ ಕೈಗಾರಿಕಾ ಪ್ರದೇಶದಲ್ಲಿ ಹೊಸ ಕೈಗಾರಿಕೆ ಆರಂಭಕ್ಕೆ ಅನುಮತಿ ನೀಡುವಾಗ, ಪರಿಸರ ಮಾಲಿನ್ಯ ಉಂಟು ಮಾಡುವ ಕೈಗಾರಿಕೆಗಳಿಗೆ ಅನುಮತಿ ನೀಡದಂತೆ ಕೈಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಕೈಗಾರಿಕಾ ಸ್ಪಂದನ ಹಾಗೂ ಜಿಲ್ಲೆಯ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಬದಲಾವಣೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರಿಸರ ಮಾಲಿನ್ಯ ಉಂಟುಮಾಡುವ ಹೊಸ ಕೈಗಾರಿಕೆಗಳ ಸ್ಥಾಪನೆಯಿಂದ ಈಗಾಗಲೇ ಕಾರ್ಯನಿರತವಾಗಿರುವ ಕೈಗಾರಿಕೆಗಳ ಕಾರ್ಯನಿರ್ವಹಣೆಗೆ ತೊಡಕಾಗುವುದರ ಜೊತೆಗೆ ಆಹಾರ ವಸ್ತುಗಳ ಉತ್ಪಾದನೆ, ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಇತರೆ ಆಹಾರ ಸಂಬಂದಿತ ಕೈಗಾರಿಕೆಗಳು ಶಾಶ್ವತವಾಗಿ ಮುಚ್ಚುವ ಪರಿಸ್ಥಿತಿ ತಲೆದೋರಲಿದ್ದು, ಈ ಕೈಗಾರಿಕೆಗಳನ್ನು ನಂಬಿಕೊಂಡಿರುವ ಕಾರ್ಮಿಕರಿಗೆ ಸಹ ತೊಂದರೆಯಾಗಲಿದೆ. ಆದ್ದರಿಂದ ಹೊಸ ಕೈಗಾರಿಕೆಗಳಿಗೆ ಅನುಮತಿ ನೀಡುವಾಗ ಪರಿಸರ ಇಲಾಖೆ ಹಾಗೂ ಕೈಗಾರಿಕಾ ಇಲಾಖೆಗಳು ಹೆಚ್ಚಿನ ಮುತುವರ್ಜಿ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಜಿಲ್ಲೆಯ ವಿವಿಧ ಕೈಗಾರಿಕಾ ವಲಯಗಳಲ್ಲಿ ಉದ್ದಿಮೆ ಸ್ಥಾಪನೆಗೆ ಸಲ್ಲಿಸಿರುವ ಅರ್ಜಿಗಳ ಕುರಿತು ಸಭೆಯಲ್ಲಿ ವಿಸ್ತ್ರತ ಚರ್ಚೆ ನಡೆಯಿತು. ಕೈಗಾರಿಕಾ ಉದ್ದೇಶಕ್ಕೆ ಪಡೆದ ಭೂಮಿ ಇತರೆ ಉದ್ದೇಶಗಳಿಗೆ ಬಳಕೆ ಮಾಡುವ ಕುರಿತು ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ, ಬ್ಯಾಂಕ್‍ಗಳಲ್ಲಿ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರ ಕುರಿತಂತೆ, ಜಿಲ್ಲಾ ಲೀಡ್ ಬ್ಯಾಂಕ್ ಸಭೆಗೆ, ಕೈಗಾರಿಕೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ, ಸಭೆಯಲ್ಲಿ ಅವರ ಸಮಸ್ಯೆಗಳನ್ನು ಆಲಿಸಿ, ಸೂಕ್ತ ನೆರವು ಒದಗಿಸುವಂತೆ ಲೀಡ್ ಬ್ಯಾಂಕ್ ಮೆನೇಜರ್ ರುದ್ರೇಶ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪ್ರಧಾನ ಮಂತ್ರಿ ಉದ್ಯೋಗ ಸೃಜನಾ ಯೋಜನೆ ಮತ್ತು ಮುಖ್ಯಮಂತ್ರಿ ಉದ್ಯೋಗ ಸೃಜನಾ ಯೋಜನೆಯಲ್ಲಿ ನಿಗಧಿತ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ಕರಕುಶಲ ಅಭಿವೃಧ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಮಾನಂದ ನಾಯಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್ , ಕೈಗಾರಿಕೆ ಸಂಘದ ಅಧ್ಯಕ್ಷ ಐ.ಆರ್.ಫರ್ನಾಂಡಿಸ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

Comments are closed.