ಕರಾವಳಿ

ಕೊಡೇರಿ ಬಂದರಿನ ಅಭಿವೃದ್ಧಿಗೆ 4.50 ಕೋಟಿ ಅನುದಾನ ಮಂಜೂರು: ಶಾಸಕ ಬಿ.ಎಂ ಸುಕುಮಾರ್ ಶೆಟ್ಟಿ

Pinterest LinkedIn Tumblr

ಕುಂದಾಪುರ: ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಸುಮಾರು 800 ಕೋಟಿ ರೂ. ಬಿಡುಗಡೆಯಾಗಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ದೃಷ್ಟಿಯಿಂದ ಸುಮಾರು 550 ಕೋಟಿ ರೂ. ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರಕಾರ ಸುಮಾರು 250 ಕೋಟಿ ರೂ. ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. 300 ಕೋಟಿ ರೂ. ಪ್ರಸ್ತಾವನೆ ರಾಜ್ಯ ಸರಕಾರದ ಮುಂದಿದ್ದು ಮಂಜೂರಾತಿ ದೊರೆಯುವ ನಿರೀಕ್ಷೆ ಇದೆ. ಮುಂದಿನ ಎರಡು ವರ್ಷದೊಳಗೆ ಕ್ಷೇತ್ರದ ಪ್ರತಿಯೊಂದು ಮನೆಗೂ ಕುಡಿಯುವ ನೀರಿನ ನಳ್ಳಿ ಅಳವಡಿಸಿ ವಾರಾಹಿ ನದಿಯ ನೀರನ್ನು ನೀಡುವ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಕಛೇರಿ ಸಮೀಪ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಗಂಗೊಳ್ಳಿ ಮುಖ್ಯರಸ್ತೆಯ 1.5 ಕೋಟಿ ರೂ. ವೆಚ್ಚದ ಕಾಂಕ್ರೀಟಿಕರಣ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹಲವು ವರ್ಷಗಳ ಹಿಂದಿನಿಂದಿಲೂ ಗಂಗೊಳ್ಳಿ ಮುಖ್ಯರಸ್ತೆ ಕಾಂಕ್ರೀಟಿಕರಣದ ಬೇಡಿಕೆಯನ್ನು ಈ ಭಾಗದ ಜನರು ಇಟ್ಟಿದ್ದು, ಈ ಕಾಮಗಾರಿ ನಿರ್ವಹಿಸಲು ಲೋಕೋಪಯೋಗಿ ಇಲಾಖೆ ಮೂಲಕ 150 ಲಕ್ಷ ರೂ. ಅನುದಾನ ನೀಡಲಾಗಿದೆ. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಪುನರ್ ನಿರ್ಮಾಣಕ್ಕೆ 12 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಪ್ರಾರಂಭಿಸಲು ಈಗಾಗಲೇ 4 ಕೋಟಿ ರೂ. ಬಿಡುಗಡೆಯಾಗಿದೆ. ಜೆಟ್ಟಿ ಪ್ರದೇಶದಲ್ಲಿ ಹೂಳೆತ್ತಲು 3.5 ಕೋಟಿ ರೂ. ಮಂಜೂರಾತಿ ದೊರೆತಿದೆ. ಮರವಂತೆ ಹೊರಬಂದರಿನ ಎರಡನೇ ಹಂತದ ಕಾಮಗಾರಿಗೆ 86 ಕೋಟಿ ಬಜೆಟ್‌ನಲ್ಲಿ ಮೀಸಲಿರಿಸಲಾಗಿದ್ದು, ಕೊಡೇರಿ ಬಂದರಿನ ಅಭಿವೃದ್ಧಿಗೆ 4.50 ಕೋಟಿ ಅನುದಾನ ಮಂಜೂರಾಗಿದೆ. ಗಂಗೊಳ್ಳಿಯಲ್ಲಿ ರಿಂಗ್ ರೋಡ್ ನಿರ್ಮಾಣ, ಕೆಲವು ಪ್ರಮುಖ ಚರಂಡಿಗಳ ಅಭಿವೃದ್ಧಿ ಪ್ರಸ್ತಾವನೆ ಸರಕಾರಕ್ಕೆ ಸಲ್ಲಿಸಲಾಗಿದ್ದು ಅನುದಾನ ಹೊಂದಿಸಿ ಕಾಮಗಾರಿಗೆ ಮಂಜೂರಾತಿ ಪಡೆಯಲು ಪ್ರಯತ್ನಿಸಲಾಗುವುದು. ಒಟ್ಟಾರೆಯಾಗಿ ಮುಂದಿನ ಮೂರು ವರ್ಷದೊಳಗೆ ಬೈಂದೂರು ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲು ಶ್ರಮಿಸಲಾಗುವುದು ಎಂದು ಅವರು ಹೇಳಿದರು.

ಪುರೋಹಿತರಾದ ಜಿ.ರಾಘವೇಂದ್ರ ಆಚಾರ್ಯ ಪೂಜಾ ವಿಧಿವಿಧಾನ ನೆರವೇರಿಸಿದರು. ಬಿಜೆಪಿ ಬೈಂದೂರು ಮಂಡಲ ಅದ್ಯಕ್ಷ ದೀಪಕಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಸುರೇಶ ಬಟವಾಡೆ, ತಾಲೂಕು ಪಂಚಾಯತ್ ಸದಸ್ಯರಾದ ಸುರೇಂದ್ರ ಖಾರ್ವಿ, ನಾರಾಯಣ ಕೆ., ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದುರ್ಗಾದಾಸ್, ಅಸಿಸ್ಟೆಂಟ್ ಇಂಜಿನಿಯರ್ ರಾಘವೇಂದ್ರ ನಾಯ್ಕ್, ಗುತ್ತಿಗೆದಾರ ರವಿಕಿರಣ್ ಡಿಕೋಸ್ಟ, ಬಿಜೆಪಿ ಮುಖಂಡರಾದ ಉಮೇಶ ಮೇಸ್ತ, ಶೇಖರ ದೇವಾಡಿಗ, ಹರೀಶ ಮೇಸ್ತ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ಗ್ರಾಪಂ ಕಾರ್ಯದರ್ಶಿ ದಿನೇಶ ಶೇರುಗಾರ್, ಸ್ಥಳೀಯ ಬಿಜೆಪಿ ಕಾರ್ಯಕರ್ತರು, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು. ಗ್ರಾಪಂ ಸದಸ್ಯ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು.

Comments are closed.