ಉಡುಪಿ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 7(2) ರಂತೆ, ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಈ ಕೆಳಗಿನಂತಿವೆ.
ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ, ಬ್ಯಾನರ್‌ಗಳನ್ನು ಬಳಸುವಂತಿಲ್ಲ. ಸ್ಫರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ / ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ.
ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ರಾಜಕೀಯ ಮುಖಂಡರ ಭಾವಚಿತ್ರ/ ಪಕ್ಷದ ಚಿಹ್ನೆಯಿರುವ ಕರಪತ್ರಗಳನ್ನು ಮುದ್ರಿಸುವುದು/ ಹಂಚುವುದು ಮಾಡುವಂತಿಲ್ಲ. ರಾಜಕೀಯ ಮುಖಂಡರ ಭಾವಚಿತ್ರ, ರಾಜಕೀಯ ಪಕ್ಷಗಳ ಚಿಹ್ನೆಯಿರುವ ಕರಪತ್ರಗಳು, ಕಟೌಟ್‌ಗಳು, ಬ್ಯಾನರ್ ಮತ್ತು ಬಂಟಿಂಗ್‌ಗಳ ಮೂಲಕ ಪ್ರಚಾರ ಮಾಡುವಂತಿಲ್ಲ.
ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ.
ಈ ಮೇಲೆ ತಿಳಿಸಿರುವಂತಹ ಪ್ರಕರಣಗಳು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಉಲ್ಲಂಘನೆಯಾಗಿರುವುದು ಕಂಡುಬಂದಲ್ಲಿ ಅಂತಹ ಚುನಾವಣಾ ಪ್ರಚಾರ ಸಾಮಾಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.