ಕರಾವಳಿ

ಉಡುಪಿ‌ ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಲು ಡಿಸಿ ಜಿ.ಜಗದೀಶ್ ಸೂಚನೆ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆ ಕಂಡುಬರದಂತೆ ಅಧಿಕಾರಿಗಳು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಗ್ರಾಮಗಳನ್ನು ಗುರುತಿಸಿ, ಈ ಬಾರಿ ಆ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬರದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಎಲ್ಲಾ ತಾಲೂಕುಗಳು ತಹಸೀಲ್ದಾರುಗಳು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆಗಳಲ್ಲಿ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಕುರಿತಂತೆ ಸಂಬಮದಪಟ್ಟ ಗ್ರಾಮ ಪಂಚಾಯತ್‌ನ ಪಿಡಿಓ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜಿನಿಯರ್‌ಗಳ ಅಭಿಪ್ರಾಯ ಪಡೆದು ಟೆಂಡರ್ ಪ್ರಕ್ರಿಯೆಗಳನ್ನು ಸಿದ್ಧ ಮಾಡಿಟ್ಟುಕೊಂಡು, ಸಮಸ್ಯೆ ತಲೆದೋರಿದ ಕೂಡಲೇ ನೀರು ಸರಬರಾಜು ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಿ. ಸಾಧ್ಯವಿದ್ದಲ್ಲಿ ಖಾಸಗಿ ಬೋರ್ ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಿ ಎಂದು ತಹಸೀಲ್ದಾರ್‌ಗಳಿಗೆ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರವಾಹಕ್ಕೆ ತುತ್ತಾಗುವ ಪ್ರದೇಶಗಳನ್ನು ಗುರುತಿಸಿ ನಕ್ಷೆ ತಯಾರಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಗೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಗ್ರಾಮ ಪಂಚಾಯತ್‌ಗಳ ವಿಪತ್ತು ನಿರ್ವಹಣಾ ಯೋಜನೆಯಲ್ಲಿ ಅಗತ್ಯವಿರುವ ಗ್ರಾಮ ಪಂಚಾಯತ್‌ಗಳಿಗೆ ಸುರಕ್ಷತಾ ಉಪಕರಣಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ನಗರಾಬಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ರವಿ ಓಜನಹಳ್ಳಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Comments are closed.