ಕರ್ನಾಟಕ

ಕುತೂಹಲ ಕೆರಳಿಸಿದ ವಾಜುಭಾಯಿ-ಬಿಎಸ್‍ವೈ ಭೇಟಿ; ಇದೊಂದು ಸೌಜನ್ಯದ ಭೇಟಿ: ಯಡಿಯೂರಪ್ಪ

Pinterest LinkedIn Tumblr

vajubai-an-bsy

ಬೆಂಗಳೂರು, ಸೆ. 18: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೂತನ ರಾಜ್ಯಪಾಲ ವಾಜುಭಾಯಿ ವಾಲಾ ಅವರನ್ನಿಂದು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅರ್ಕಾವತಿ ಡಿನೋಟಿಫಿಕೇಶನ್ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ರಾಜ್ಯ ಬಿಜೆಪಿ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಚಿಂತನೆ ನಡೆಸಿದೆ.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ವಿರುದ್ಧವೂ ಡಿನೋಟಿಫಿಕೇಶನ್ ಆರೋಪ ಕೇಳಿ ಬಂದು, ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಪಾಲ ವಾಜುಭಾಯಿ ವಾಲಾ ಅವರ ನಡುವಿನ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ರಾಜ್ಯಪಾಲರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಇದೊಂದು ಸೌಜನ್ಯದ ಭೇಟಿಯಾಗಿತ್ತು. ರಾಜ್ಯಪಾಲರು ಅಧಿಕಾರ ಸ್ವೀಕರಿಸಿದ ನಂತರ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಇಂದು ಸಮಯಾವಕಾಶ ಕೂಡಿ ಬಂದಿದ್ದರಿಂದ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ ಎಂದು ಸ್ಪಷ್ಟಪಡಿಸಿದರು. ಭೇಟಿಯ ಸಮಯದಲ್ಲಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತೇ ಹೊರತು ರಾಜಕಾರಣದ ಬಗ್ಗೆ ಯಾವುದೇ ಚರ್ಚೆ ನಡೆಸಲಿಲ್ಲ. ರಾಜ್ಯಪಾಲರು ಅನುಭವಿಯಾಗಿದ್ದು, ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Write A Comment