
ಬೆಂಗಳೂರು, ಸೆ.28: ಕ್ರಿಕೆಟ್ ಬುಕ್ಕಿಂಗ್ ನಡೆಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಅವರ ವಶದಲ್ಲಿದ್ದ 23.28 ಲಕ್ಷ ರೂ. ನಗದು, ಹಣ ಎಣಿಸೊ ಯಂತ್ರ ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಗಳನ್ನು ಸೂರಜ್, ಬಾಲರಾಜ್, ಅನಿಲ್, ನಝೀರ್ ಎಂದು ಗುರುತಿಸಲಾಗಿದೆ.
ಆರೋಪಿಗಳ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಆರ್.ಟಿ.ನಗರ ಸಮೀಪದ ಸುಲ್ತಾನಪಾಳ್ಯ ಬಡಾವಣೆಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಂಧಿತ ಆರೋಪಿಗಳು ಕ್ರಿಕೆಟ್ ಬುಕ್ಕಿಂಗ್ ನಡೆಸುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ 23.28 ಲಕ್ಷ ರೂ.ನಗದು, ಹಣ ಎಣಿಸೊ ಯಂತ್ರ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳೆಲ್ಲರೂ ದುಬೈನ ಬುಕ್ಕಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆಂದು ತನಿಖೆಯಿಂದ ಗೊತ್ತಾಗಿದೆ. ಈ ಮೊಕದ್ದಮೆಯನ್ನು ದಾಖಲಿಸಿಕೊಂಡಿರುವ ಆರ್.ಟಿ.ನಗರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.