ಕರ್ನಾಟಕ

ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ನಾಯಕರ ಬಂಧನ: ಪೊಲೀಸರೊಂದಿಗೆ ಕೆಲಕಾಲ ತೀವ್ರ ವಾಗ್ವಾದ

Pinterest LinkedIn Tumblr

BJP Pro2

ಬೆಂಗಳೂರು, ನ.20: ರಾಜ್ಯ ಸರ್ಕಾರದ ವಿರುದ್ಧ ಗಾಂಧಿ ಪ್ರತಿಮೆ ಬಳಿ ಇಂದು ಬಿಜೆಪಿ ಸಂಸದರು, ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರನ್ನೊಳಗೊಂಡಂತೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾದಾಗ ಅವಕಾಶ ನೀಡದ ಪೊಲೀಸರೊಂದಿಗೆ ಕೆಲಕಾಲ ತೀವ್ರ ವಾಗ್ವಾದ ನಡೆದು ನಂತರ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.

ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಗೆ ಮುಂದಾದ ಸಂಸದೆ ಶೋಭಾ ಕರಂದ್ಲಾಜೆ ಮತ್ತಿತರ ಮುಖಂಡರ ಬಣವನ್ನು ಮೊದಲು ಪೊಲೀಸರು ಬಂಧಿಸಿದರೆ, ನಂತರ ಪೂರ್ವದ್ವಾರದ ಬಳಿಯ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಗೆ ಮುಂದಾಗಿ ಮೆರವಣಿಗೆ ನಡೆಸಿದ ಮತ್ತೊಂದು ಬಣಕ್ಕೂ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡದೆ ಬಂಧಿಸಿದರು.

ಸಂಸದೆ ಶೋಭಾ ಕರಂದ್ಲಾಜೆ , ಡಿ.ಸೋಮಶೇಖರ್, ಅಬ್ದುಲ್ ಅಜೀಂ ಸೇರಿದಂತೆ ವಿವಿಧ ಮುಖಂಡರ ನೇತೃತ್ವದಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧದ ನಡುವೆ ಇರುವ ಗಾಂಧಿ ಪ್ರತಿಮೆ ಬಳಿ ಇಂದು ಬೆಳಗ್ಗೆ ಪ್ರತಿಭಟನೆಗೆ ಮುಂದಾದಾಗ ಈ ಘಟನೆ ನಡೆಯಿತು.

Bjp-pro

BJP Pro22

ಗಲಾಟೆ ಮಾಡುವುದಿಲ್ಲ, ಕಲ್ಲು ಹೊಡೆಯುವುದಿಲ್ಲ , ಕೇವಲ ಒಂದು ಗಂಟೆ ಕಾಲ ಪ್ರತಿಭಟನೆ ನಡೆಸುತ್ತೇವೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮತ್ತಿತರರು ಹೇಳಿದರೂ ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ನಡುವೆಯೇ ಸ್ಥಳದಲ್ಲಿ ಕುಳಿತು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ಸಕ್ಕರೆ ಕಾರ್ಖಾನೆಗಳು ಉಳಿಸಿಕೊಂಡಿರುವ ಬಾಕಿ ಹಣವನ್ನು ಕಬ್ಬು ಬೆಳೆಗಾರರಿಗೆ ಕೂಡಲೇ ಪಾವತಿಸುವಂತೆ ಕ್ರಮ ಕೈಗೊಳ್ಳಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬು ಖರೀದಿ ದರ ನಿಗದಿ ಮಾಡಿ ಕಾರ್ಖಾನೆಗಳು ಕಬ್ಬು ಅರೆಯುವ ಪ್ರಕ್ರಿಯೆಯನ್ನು ಆರಂಭಿಸಬೇಕು. ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿ ಇಂದು ಬಿಜೆಪಿ ವಿವಿಧ ಮುಖಂಡರ ನೇತೃತ್ವದಲ್ಲಿ ವಿಧಾನಸೌಧದ ಬಳಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾದ ಒಂದು ಗುಂಪನ್ನು ಪೊಲೀಸರು ಬಂಧಿಸಿದರು.

ವಿಧಾನಸೌಧದ ಪೂರ್ವ ದ್ವಾರದ ಬಳಿಯ ಗಾಂಧಿ ಪ್ರತಿಮೆ ಬಳಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ನೇತೃತ್ವದಲ್ಲಿ ಸಂಸದರು , ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಒಳಗೊಂಡ ಮತ್ತೊಂದು ಬಣ ಸರ್ಕಾರದ ಕಾರ್ಯ ವೈಖರಿ ಖಂಡಿಸಿ ಪ್ರತಿಭಟನೆ ನಡೆಸಿ ನಂತರ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದರು.

ರೈತರ ಸಮಸ್ಯೆಗಳ ಪರಿಹಾರ ಮಾಡುವಂತೆ ಜಲ್ಲಿ , ಮರಳು ಸಮರ್ಪಕವಾಗಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು.ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಬೇಕು. ಭೂ ಒತ್ತುವರಿ ಮಾಡಿಕೊಂಡಿರುವ ಸಚಿವರನ್ನು ಸಂಪುಟದಿಂದ ಕೈ ಬಿಡಬೇಕು ಎಂಬ ಘೋಷಣೆಗಳನ್ನು ಕೂಗಲಾಯಿತು. ಈ ವೇಳೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಂಪುಟದಿಂದ ಭೂಗಳ್ಳರನ್ನು ಕೈ ಬಿಡುವಂತೆ ಅಕ್ರಮ ಗಣಿಗಾರಿಕೆ ತಡೆಗಟ್ಟಬೇಕು. ಮಹಿಳೆಯರಿಗೆ ಮತ್ತು ಮಕ್ಕಳಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿದರು.ಸರ್ಕಾರದ ವೈಫಲ್ಯ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆಗೂ ಅವಕಾಶ ನೀಡದ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರಿಗೆ ಇದು ಅಂತ್ಯ ಕಾಲ ಎಂದು ಎಚ್ಚರಿಸಿದರು. ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನದಿಂದ ವಿಚಲಿತರಾಗುವುದಿಲ್ಲ. ನಮ್ಮ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಹೇಳಿದರು.

ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಇಂದು ಸರ್ಕಾರದ ವಿರುದ್ಧ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಬಿಜೆಪಿಯ ಮುಖಂಡರು ಒಗ್ಗೂಡಿ ಪ್ರತಿಭಟನೆ ನಡೆಸುತ್ತಿದ್ದೇವೆ. ಮುಖ್ಯಮಂತ್ರಿಗಳು ನಮ್ಮ ಅಹವಾಲು ಸ್ವೀಕರಿಸಿ ಪರಿಹಾರ ಕಂಡುಕೊಳ್ಳುವ ಬದಲಿಗೆ ಸರ್ವಾಧಿಕಾರಿಯಂತೆ ವರ್ತಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸಂಸತ್‌ನಲ್ಲೂ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ವಿಧಾನಸೌಧ ಹಾಗೂ ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಗೆ ಅವಕಾಶ ನೀಡದಿರುವುದು ವಿನಾಶ ಕಾಲೇ ವಿಪರೀತ ಬುದ್ಧಿಯನ್ನು ತೋರಿಸುತ್ತಿದೆ ಎಂದು ಟೀಕಿಸಿದರು.

ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಮಾತನಾಡಿ, ಖಮರುಲ್ಲಾ ಇಸ್ಲಾಂ , ದಿನೇಶ್ ಗುಂಡೂರಾವ್ , ಮಹದೇವ ಪ್ರಸಾದ್, ಕೆ.ಜೆ.ಜಾರ್ಜ್ ಅವರನ್ನು ಸಂಪುಟದಿಂದ ಕೈ ಬಿಡಬೇಕು. ಶಾಂತಿಯುತ ಧರಣಿಗೂ ಅವಕಾಶ ನೀಡದ ಸರ್ಕಾರ ಅತ್ಯಾಚಾರಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದರು. ಜನಾಭಿಪ್ರಾಯ ಸಂಗ್ರಹಿಸಿ ಬಿಜೆಪಿ ದೊಡ್ಡ ಮಟ್ಟದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ ಎಂದರು.

ಪೂರ್ವ ಭಾರತದ ಉತ್ತರ ದ್ವಾರದವರೆಗೂ ಮೆರವಣಿಗೆ ಮೂಲಕ ಸಾಗಿ ಬಂದು ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಧರಣಿ ನಡೆಸಲು ಮುಂದಾದ ಬಿಜೆಪಿಗೆ ಮತ್ತೆ ಪೊಲೀಸರು ತಡೆಯೊಡ್ಡಿದಾಗ ಅಲ್ಲಿ ಹಾಕಿದ್ದ ಬ್ಯಾರಿಕೇಡ್‌ಗಳನ್ನು ತಳ್ಳಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಮಧ್ಯೆ ಪೊಲೀಸರು ಹಾಗೂ ಬಿಜೆಪಿ ಮುಖಂಡರ ಜತೆ ತೀವ್ರ ವಾಗ್ವಾದ ನಡೆದು ಒಂದು ಹಂತದಲ್ಲಿ ತಳ್ಳಾಟ, ನೂಕಾಟ ನಡೆದರೂ ಪೊಲೀಸರ ಬಿಗಿ-ಬಂದೋಬಸ್ತ್ ಇದ್ದದ್ದರಿಂದ ನುಗ್ಗಲು ಸಾಧ್ಯವಾಗಲಿಲ್ಲ. ಈ ವೇಳೆ ಪ್ರತಿಭಟನಾ ಕಾರರಾದ ಕರಡಿ ಸಂಗಣ್ಣ, ಪ್ರಹ್ಲಾದ್ ಜೋಷಿ, ಪಿ.ಸಿ.ಮೋಹನ್, ಮುನಿರಾಜು, ಅಶ್ವತ್ಥ ನಾರಾಯಣ, ಗೋ.ಮಧುಸೂದನ್, ವಿಮಲಾಗೌಡ, ರಾಮಚಂದ್ರಗೌಡ, ಜಗದೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ, ಈಶ್ವರಪ್ಪ ಎಲ್ಲರನ್ನೂ ಪೊಲೀಸರು ಬಂಧಿಸಿ ಕರೆದೊಯ್ದರು.

ಶಾಸಕಾಂಗ ಪಕ್ಷದ ಸಭೆ: ಇಂದು ಮಧ್ಯಾಹ್ನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು , ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸದನದ ಒಳ, ಹೊರಗೆ ಜನರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರದ ವಿರುದ್ಧ ನಡೆಸಬೇಕಾದ ಹೋರಾಟದ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು.ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಪಕ್ಷ ನಡೆಸುವ ಪ್ರತಿಭಟನೆ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Write A Comment