ಕಲಬುರ್ಗಿ: ‘ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಹಾಗೂ ಕಳಂಕಿತ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ’ ಬಿಜೆಪಿ, ‘ಕಬ್ಬಿನ ಬಾಕಿ ಹಣವನ್ನು ಒಂದೇ ಕಂತಿನಲ್ಲಿ ಪಾವತಿಸಬೇಕು ಎಂದು ಆಗ್ರಹಿಸಿ’ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಇಲ್ಲಿನ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಸರ್ದಾರ್ ವಲ್ಲಭಭಾಯ್ ಪಟೇಲ್ ಮಾರ್ಗವಾಗಿ ಮಿನಿ ವಿಧಾನಸೌಧಕ್ಕೆ ತೆರಳುತ್ತಿದ್ದ ಬಿಜೆಪಿ ಮುಖಂಡರಾದ ರೇವು ನಾಯಕ ಬೆಳಮಗಿ, ಸುನಿಲ್ ವಲ್ಯಾಪುರೆ, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಅಮರನಾಥ್ ಪಾಟೀಲ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ ಸೇರಿದಂತೆ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.
ಬಾಕಿ ಪಾವತಿಗೆ ಆಗ್ರಹ: ಕಬ್ಬಿನ ಕಬ್ಬಿನ ಬಾಕಿ ಹಣವನ್ನು ಒಂದೇ ಕಂತಿನಲ್ಲಿ ಪಾವತಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ರೈತರನ್ನು ಪೊಲೀಸರು ಮಾರ್ಗ ಮಧ್ಯೆಯೇ ತಡೆದರು. ಇದರಿಂದ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಸ್ಥಳಕ್ಕೆ ಬಂದ ಸಕ್ಕರೆ ಸಚಿವ ಎಚ್.ಎಸ್.ಮಹದೇವಪ್ರಸಾದ್, ‘ಮೂರು ದಿನಗಳಲ್ಲಿ ಕಾರ್ಖಾನೆ ಆರಂಭಿಸುವಂತೆ ಹಾಗೂ ಬಾಕಿ ಹಣವನ್ನು ಪಾವತಿಸುವಂತೆ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗಳಿಗೆ ಸೂಚಿಸಲಾಗಿದೆ. ಇನ್ನುಳಿದ ಬೇಡಿಕೆಗಳ ಬಗ್ಗೆ ರೈತ ಪ್ರತಿನಿಧಿಗಳು ಹಾಗೂ ಕಾರ್ಖಾನೆ ಮಾಲೀಕರೊಂದಿಗೆ ವಾರದಲ್ಲಿ ಸಭೆ ಕರೆದು ತೀರ್ಮಾನಿಸಲಾಗುವುದು’ ಎಂದು ಭರವಸೆ ನೀಡಿದರು.
ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಮುಖಂಡರಾದ ಧರ್ಮರಾಜ ಸಾಹು, ರಮೇಶ ಹೂಗಾರ, ಶರಣಕುಮಾರ ಬಿಲ್ಲಾಡ ಇತರರು ಇದ್ದರು.
